ಚಾಮರಾಜನಗರ: ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಬಿಸಲವಾಡಿ ಸರ್ಕಾರಿ ಪ್ರೌಢಶಾಲೆ ಇವರ ಸಹಯೋಗದಲ್ಲಿ ಬಿಸಲವಾಡಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಕಾನೂನು ಅರಿವು ಕಾರ್ಯಕ್ರಮವನ್ನು ಇಂದು ಹಮ್ಮಿಕೊಳ್ಳಲಾಗಿತ್ತು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಂ. ಶ್ರೀಧರ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ವಿದ್ಯಾರ್ಥಿಗಳಿಗೆ ಬಾಲ್ಯ ವಿವಾಹ ನಿಷೇಧ ಕಾಯ್ದೆ ಹಾಗೂ ಮಹಿಳೆ ಮತ್ತು ಮಕ್ಕಳ ಮೇಲಿನ ದೌರ್ಜನ್ಯಗಳ ತಡೆ ಕಾಯ್ದೆ ಕುರಿತು ಮಾಹಿತಿ ನೀಡಿ ಕಾನೂನು ಅರಿವಿನ ಬಗ್ಗೆ ಜ್ಞಾನ ಮೂಡಿಸಬೇಕು ಎಂದರು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದಿಂದ ಆಗುವ ಪ್ರಯೋಜನಗಳನ್ನು ವಿದ್ಯಾರ್ಥಿಗಳು ತಮ್ಮ ನೆರೆಹೊರೆಯವರಿಗೆ ತಿಳಿಸಬೇಕು. ರಾಷ್ಟ್ರೀಯ ಲೋಕ್ ಅದಾಲತ್‌ನಲ್ಲಿ ಆಸ್ತಿ ವಿಚಾರ, ಕೌಟುಂಬಿಕ ಕಲಹಗಳು, ಜೀವನಾಂಶ, ಅಪಘಾತಗಳಲ್ಲಿನ ಪರಿಹಾರವನ್ನು ಪಡೆಯುವ ಸಂಬಂಧ ಇರುವ ರಾಜಿ ಯೋಗ್ಯ ಪ್ರಕರಣವನ್ನು ಇತ್ಯರ್ಥ ಪಡಿಸಿಕೊಳ್ಳಬಹುದಾಗಿರುತ್ತದೆ ಎಂದು ಶ್ರೀಧರ ಅವರು ತಿಳಿಸಿದರು.
ಸರ್ಕಾರಿ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ವೇಣುಗೋಪಾಲ್, ಬಿಸಲವಾಡಿ ಕುಮಾರ್, ಶಾಲೆಯ ಶಿಕ್ಷಕರು, ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
