ಚಾಮರಾಜನಗರ: ವಸತಿ, ಮೂಲಸೌಲಭ್ಯ ಅಭಿವೃದ್ಧಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸೋಮಣ್ಣ ಅವರು ಇಂದು ಚಾಮರಾಜನಗರ ಪಟ್ಟಣ ಹಾಗೂ ಉಡಿಗಾಲದಲ್ಲಿ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಧರಣಿ ನಿರತರಾಗಿದ್ದವರ ಸ್ಥಳಕ್ಕೆ ಭೇಟಿ ನೀಡಿ ಅಹವಾಲು ಆಲಿಸಿ ಮಾತುಕತೆ ನಡೆಸಿದರು.
ನಗರದ ಜಿಲ್ಲಾಡಳಿತ ಭವನದ ಅವರಣದಲ್ಲಿ ಚಾಮರಾಜನಗರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಮತ್ತು ಬೋಧನಾ ಆಸ್ಪತ್ರೆಯ ಸಿಬ್ಬಂದಿ ಹೊರಗುತ್ತಿಗೆ ನೌಕರರ ಮುಂದುವರಿಕೆ ಸೇರಿದಂತೆ ಇನ್ನಿತರ ವಿಷಯಗಳ ಬೇಡಿಕೆಗಾಗಿ ಆಗ್ರಹಿಸಿ ಧರಣಿ ನಿರತರಾಗಿದ್ದವರ ಸ್ಥಳಕ್ಕೆ ಭೇಟಿ ನೀಡಿ ಸಮಸ್ಯೆಗಳನ್ನು ಆಲಿಸಿದರು. ಈ ಸಂಬಂಧ ಸೂಕ್ತ ಕ್ರಮ ವಹಿಸುವ ಕುರಿತು ಭರವಸೆ ನೀಡಿದರು.
ಉಡಿಗಾಲದಲ್ಲಿ ಆನೆಮಡುವಿನ ಕೆರೆಗೆ ನೀರು ಹರಿಸುವ ಸಂಬಂಧ ರೈತ ಸಂಘಟನೆಗಳು, ಕಬ್ಬು ಬೆಳೆಗಾರರ ಸಂಘದವರು ನಡೆಸುತ್ತಿರುವ ಧರಣಿ ಸತ್ಯಾಗ್ರಹ ಸ್ಥಳಕ್ಕೆ ಭೇಟಿ ನೀಡಿದ ಉಸ್ತುವಾರಿ ಸಚಿವರು ಈ ತಿಂಗಳ ೨೯ ಇಲ್ಲವೇ ೩೦ರೊಳಗೆ ಚರ್ಚಿಸಲು ಸಂದೇಶ ಕಳುಹಿಸಲಾಗುವುದು. ಕೆರೆಗಳಿಗೆ ನೀರು ತುಂಬಿಸುವ ವಿಷಯದಲ್ಲಿ ಅಗತ್ಯ ಕ್ರಮ ವಹಿಸಲಾಗುವುದು ಎಂದರು.
ಗುಂಡ್ಲುಪೇಟೆ ತಾಲೂಕಿನ ಶಿವಪುರದಲ್ಲಿ ರೈತ ಮುಖಂಡರಿಂದ ವಸತಿ ಸೇರಿದಂತೆ ಇನ್ನಿತರ ಸೌಲಭ್ಯಗಳ ಸಂಬಂಧ ಮನವಿ ಸ್ವೀಕರಿಸಿ ಮಾತನಾಡಿದರು.
ಶಾಸಕರಾದ ಸಿ.ಎಸ್. ನಿರಂಜನಕುಮಾರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಎಂ. ಗಾಯಿತ್ರಿ, ಹೆಚ್ಚುವರಿ ಜಿಲ್ಲಾಧಿಕಾರಿ ಎಸ್. ಕಾತ್ಯಾಯಿನಿದೇವಿ, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಎಸ್. ಸುಂದರರಾಜು, ಡಿವೈಎಸ್ಪಿ ಪ್ರಿಯದರ್ಶಿನಿ ಸಾಣಿಕೊಪ್ಪ, ಇತರರು ಹಾಜರಿದ್ದರು.