ಚಾಮರಾಜನಗರ: ಮಲೆ ಮಹದೇಶ್ವರ ಬೆಟ್ಟದ ಮಾರ್ಗದಲ್ಲಿ ನಡೆಯುತ್ತಿರುವ ಕೆ ಶಿಪ್ ರಸ್ತೆ ಕಾಮಗಾರಿ ಹಾಗೂ ಮಲೆ ಮಹದೇಶ್ವರ ಬೆಟ್ಟದ ಕ್ಷೇತ್ರದಲ್ಲಿ ಭಕ್ತಾಧಿಗಳಿಗಾಗಿ ಕೈಗೊಂಡಿರುವ ಅಭಿವೃದ್ಧಿ ಕಾಮಗಾರಿಗಳನ್ನು ಸಮರೋಪಾದಿಯಲ್ಲಿ ಕೈಗೊಂಡು ಪೂರ್ಣಗೊಳಿಸುವಂತೆ ವಸತಿ, ಮೂಲ ಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ವಿ.ಸೋಮಣ್ಣ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಮಲೆ ಮಹದೇಶ್ವರ ಬೆಟ್ಟದ ರಸ್ತೆ ಕಾಮಗಾರಿ ವೀಕ್ಷಣೆ ಹಾಗೂ ಮಲೆ ಮಹದೇಶ್ವರ ಬೆಟ್ಟದಲ್ಲಿ ಪ್ರಗತಿಯಲ್ಲಿರುವ ಅಭಿವೃದ್ಧಿ ಕಾಮಗಾರಿಗಳನ್ನು ಪರಿಶೀಲಿಸಿದ ಬಳಿಕ ಮಲೆ ಮಹದೇಶ್ವರ ಬೆಟ್ಟದ ನಾಗಮಲೆ ಭವನದಲ್ಲಿ ಅಭಿವೃದ್ಧಿ ಕಾಮಗಾರಿ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಕೊಳ್ಳೇಗಾಲದಿಂದ ಹನೂರು ವರೆಗೆ ಕೆ ಶಿಪ್ ಯೋಜನೆಯಡಿ ಕೈಗೆತ್ತಿಕೊಂಡಿರುವ ರಸ್ತೆ ಅಭಿವೃದ್ಧಿ ಕಾಮಗಾರಿಯನ್ನು ಇನ್ನು ಆರು ತಿಂಗಳೊಳಗೆ ಪೂರ್ಣಗೊಳಿಸಬೇಕು. ಹನೂರಿನಿಂದ ಮಲೆ ಮಹದೇಶ್ವರ ಬೆಟ್ಟದ ರಸ್ತೆ ಅಭಿವೃದ್ಧಿ ಕಾರ್ಯಗಳಿಗೂ ಸೂಕ್ತ ಪ್ರಸ್ತಾವನೆಯನ್ನು ಸಿದ್ದಪಡಿಸಿ ಕಳುಹಿಸಬೇಕು. ತಾಳುಬೆಟ್ಟದಿಂದ ಮಲೆ ಮಹದೇಶ್ವರ ಬೆಟ್ಟದ ಮೇಲಿನವರೆಗೆ ರಸ್ತೆ ಅಭಿವೃದ್ಧಿಗೊಳ್ಳಬೇಕು. ಈ ನಿಟ್ಟಿನಲ್ಲಿ ಅಗತ್ಯ ಪ್ರಕ್ರಿಯೆ ಕೈಗೊಳ್ಳಬೇಕೆಂದು ಸಚಿವರು ನಿರ್ದೇಶನ ನೀಡಿದರು.

ತಾಳುಬೆಟ್ಟದಿಂದ ಮಲೆ ಮಹದೇಶ್ವರ ಬೆಟ್ಟದ ಮೇಲಿನವರೆಗೆ ಮೆಟ್ಟಿಲುಗಳ ನಿರ್ಮಾಣ ಕಾರ್ಯ ಸ್ಥಗಿತಗೊಳಿಸಬಾರದು. ಅರಣ್ಯ ಇಲಾಖೆ ಅಧಿಕಾರಿಗಳು ಮೆಟ್ಟಿಲುಗಳ ನಿರ್ಮಾಣ ಕಾಮಗಾರಿಗೆ ಅನುಮತಿಸಿದ್ದಾರೆ ಎಂದು ತಿಳಿಸಿದ್ದಾರೆ. ಹೀಗಾಗಿ ಈ ಕುರಿತು ಕೂಡಲೇ ಮೆಟ್ಟಿಲು ನಿರ್ಮಾಣಗಳ ಕಾಮಗಾರಿಯನ್ನು ಆರಂಭಿಸಬೇಕು ಎಂದು ಉಸ್ತುವಾರಿ ಸಚಿವರು ಸೂಚನೆ ನೀಡಿದರು.

ಮಲೆ ಮಹದೇಶ್ವರ ಬೆಟ್ಟದಲ್ಲಿ ಒಳಚರಂಡಿ ಕಾಮಗಾರಿಯು ನಿರೀಕ್ಷಿತ ಮಟ್ಟದಲ್ಲಿ ವೇಗ ಪಡೆದುಕೊಂಡಿಲ್ಲ, ಇನ್ನು ಮುಂದೆ ವಿಳಂಬಕ್ಕೆ ಅವಕಾಶವಾಗದ ಹಾಗೇ ಮಳೆಗಾಲಕ್ಕೂ ಮುಂಚೆಯೇ ಕೆಲಸ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ತಾಕೀತು ಮಾಡಿದರು.

ತಂಬಡಗೇರಿಯಲ್ಲಿ ಪ್ರಗತಿಯಲ್ಲಿರುವ ರಸ್ತೆ ಕಾಮಗಾರಿ ಪರಿಪೂರ್ಣವಾಗಬೇಕು. ರಸ್ತೆ ಬದಿಯಲ್ಲಿನ ಕೆಲಸಗಳು ಸರಿಯಾಗಿ ನಿರ್ವಹಿಸಬೇಕು. ಕ್ಷೇತ್ರದ ರಸ್ತೆಗಳ ಅಭಿವೃದ್ಧಿ ಕಾರ್ಯವು ವೇಗವಾಗಿ ನಡೆಯಬೇಕು ಎಂದು ಸಚಿವರು ತಿಳಿಸಿದರು.

ದಾಸೋಹ ಭವನದಲ್ಲಿ ಶುಚಿತ್ವ ಕಾಪಾಡಬೇಕು. ಅಡುಗೆಕೋಣೆ ಸೇರಿದಂತೆ ಇತರೆ ದಾಸೋಹ ಸೌಲಭ್ಯಗಳಿಗೆ ಸುಚ್ಚಜಿತ ವ್ಯವಸ್ಥೆಗಳನ್ನು ಕಲ್ಪಿಸಲು ನೀಲ ನಕಾಶೆಯೊಂದಿಗೆ ಪ್ರಸ್ತಾವನೆ ಸಲ್ಲಿಸುವಂತೆ ಸೂಚಿಸಿದರು.

ವಸತಿ ಗೃಹಗಳ ನಿರ್ಮಾಣ, ಮಲೆ ಮಹದೇಶ್ವರ ಸ್ವಾಮಿಯ ಎತ್ತರದ ಪ್ರತಿಮೆ ನಿರ್ಮಾಣ, ಭಕ್ತರ ಸರತಿ ಸಾಲಿಗಾಗಿ ಕೈಗೊಂಡಿರುವ ಕಾಮಗಾರಿ ಸೇರಿದಂತೆ ಭಕ್ತಾಧಿಗಳಿಗಾಗಿ ಕಲ್ಪಿಸಲಾಗುತ್ತಿರುವ ವಿವಿಧ ಸೌಲಭ್ಯಗಳ ಬಗ್ಗೆ ಕುರಿತು ಪ್ರಗತಿ ಪರಿಶೀಲಿಸಿದ ಉಸ್ತುವಾರಿ ಸಚಿವರು ಇದೇ ಮಾರ್ಚ್ ತಿಂಗಳ ೧೯ ರಂದು ಮಲೆ ಮಹದೇಶ್ವರ ಬೆಟ್ಟದಲ್ಲಿ ಕ್ಷೇತ್ರದ ಅಭಿವೃದ್ಧಿ ಕಾರ್ಯಗಳ ಸಂಬಂಧ ವಿವರವಾಗಿ ಪ್ರಗತಿ ಪರಿಶೀಲಿಸಲಾಗುವುದೆಂದು ಜಿಲ್ಲಾ ಉಸ್ತುವಾರಿ ಸಚಿವರು ತಿಳಿಸಿದರು.

ಸಭೆಯಲ್ಲಿ ಸಾಲೂರು ಮಠದ ಶ್ರೀಗಳಾದ ಶಾಂತಮಲ್ಲಿಕಾರ್ಜುನ ಸ್ವಾಮಿಜಿ, ಶಾಸಕರಾದ ಆರ್. ನರೇಂದ್ರ, ಎನ್. ಮಹೇಶ್, ಜಿಲ್ಲಾಧಿಕಾರಿ ಚಾರುಲತಾ ಸೋಮಲ್, ಮಲೆ ಮಹದೇಶ್ವರ ಕ್ಷೇತ್ರಾಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಜಯವಿಭವ ಸ್ವಾಮಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಎಂ. ಗಾಯತ್ರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಿವಕುಮಾರ್, ಕೆ ಶಿಪ್ ಯೋಜನೆಯ ಮುಖ್ಯ ಇಂಜಿನಿಯರ್ ಕೆ.ಪಿ. ಶಿವಕುಮಾರ್, ಮಹದೇಶ್ವರ ವನ್ಯಜೀವಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಏಡುಕೊಂಡಲು, ಲೋಕೋಪಯೋಗಿ ಇಲಾಖೆಯ ಹಿರಿಯ ಇಂಜಿನಿಯರ್‌ಗಳಾದ ಗಣೇಶ್, ವಿನಯ್, ಕಾವೇರಿ ನೀರಾವರಿ ನಿಗಮದ ಮುಖ್ಯ ಇಂಜಿನಿಯರ್ ಶಂಕರೇಗೌಡ ಸೇರಿದಂತೆ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.