ಮೈಸೂರು. ನವೆಂಬರ್- ಜಿಲ್ಲಾ ಕೌಶಾಲ್ಯಾಭಿವೃದ್ಧಿ ಕೇಂದ್ರದ ವತಿಯಿಂದ ಕೌಶಲ್ಯ ತರಬೇತಿ ಕಾರ್ಯಕ್ರಮಗಳನ್ನು ಆಯೋಜಿಸಲು ಕೂಡಲೇ ಕ್ರಮ ಕೈಗೊಳ್ಳಿ ಎಂದು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರು ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಕೌಶಲ್ಯ ಮಿಷನ್ ಕುರಿತ ಪರಿಶೀಲನಾ ಸಭೆಯ ಅಧ್ಯಕ್ಷತೆವಹಿಸಿ ಅವರು ಮಾತನಾಡಿದರು. ಮೈಸೂರು ಹಾಗೂ ನಂಜನಗೂಡಿನಲ್ಲಿ ಹೊಸದಾಗಿ ಕೌಶಲಾಭಿವೃದ್ಧಿ ಕೇಂದ್ರ ಆರಂಭಿಸುವ ಮೂಲಕ ಉದ್ಯಮಶೀಲತೆಯನ್ನು ಹೆಚ್ಚಿಸಬೇಕು. ಈ ನಿಟ್ಟಿನಲ್ಲಿ ಅಧಿಕಾರಿಗಳು ಕೂಡಲೇ ಕಾರ್ಯಪ್ರೌವೃತ್ತರಾಗಬೇಕು ಎಂದು ತಿಳಿಸಿದರು.
ಕೋವಿಡ್-19 ಹಿನ್ನೆಲೆ ಕೌಶಲ್ಯಾಭಿವೃದ್ಧಿ ಚಟುವಟಿಕೆಯಲ್ಲಿ ಕುಂಠಿತವಾಗಿದ್ದು, ಜಿಲ್ಲೆಯ ಖಾಸಗಿ ಸಂಸ್ಥೆಗಳ ಸಹಕಾರದೊಂದಿಗೆ ನಿರಂತರವಾಗಿ ಕೌಶಲ್ಯಾಭಿವೃದ್ಧಿ ಚಟುವಟಿಕೆಗಳು ನಡೆಸಬೇಕು. ಮುಂದಿನ ದಿನಗಳಲ್ಲಿ ಉದ್ಯೋಗಾವಕಾಶಗಳನ್ನು ಆಧರಿಸಿ ಸಮೀಕ್ಷೆ ಕೈಗೊಂಡು ಜಿಲ್ಲಾ ಮಟ್ಟದ ಸಮಗ್ರ ಕ್ರಿಯಾ ಯೋಜನೆ ಸಿದ್ಧಪಡಿಸಬೇಕು ಎಂದರು‌.
ಆತ್ಮನಿರ್ಭರ ಭಾರತ ಅಭಿಯಾನದಡಿ ಪ್ರಧಾನ ಮಂತ್ರಿ ಆತ್ಮನಿರ್ಭರ ನಿಧಿಯಿಂದ ಬೀದಿ ಬದಿ ವ್ಯಾಪಾರಿಗಳಿಗೆ ನೀಡುತ್ತಿರುವ ಸಾಲಾ ಸೌಲಭ್ಯವು ಅರ್ಹ ಫಲಾನುಭವಿ ಬೀದಿ ಬದಿ ವ್ಯಾಪಾರಿಗಳಿಗೆ ದೊರಕುವಂತೆ ಕ್ರಮವಹಿಸಿ ಎಂದು ಸೂಚಿಸಿದರು.
ಸಭೆಯಲ್ಲಿ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಬಿ.ಎಂ.ಶಿವಣ್ಣ, ಮಹಾನಗರ ಪಾಲಿಕೆಯ ಹೆಚ್ಚುವರಿ ಆಯುಕ್ತ ಶಶಿಕುಮಾರ್, ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಮಹಂತೇಶಪ್ಪ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

By admin