ಚಾಮರಾಜನಗರ:ಕ್ರೀಡೆಯಲ್ಲಿ ಸೋಲು ಗೆಲುವು ಅನ್ನುವುದಕ್ಕಿಂತ ಭಾಗವಹಿಸುವುದೇ ಮೊದಲ ಗೆಲುವು ಎಂದು ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರು ತಿಳಿಸಿದರು. 
ನಗರದ  ಡಾ. ಬಿ. ಆರ್ ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಶಾಖೆಯ ಆಶ್ರಯದಲ್ಲಿ ಆಯೋಜಿಸಿರುವ ಜಿಲ್ಲಾ ಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಕಾರ್ಯಕ್ರಮವನ್ನು ಗುಂಡು ಎಸೆಯುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.
ಸರ್ಕಾರಿ ನೌಕರರು ದಿನವಿಡೀ ತಮ್ಮ ತಮ್ಮ ಕೆಲಸಗಳಲ್ಲಿ ತೊಡಗಿಕೊಂಡಿರುತ್ತಾರೆ. ಕ್ರೀಡಾಕೂಟದಂತಹ ಸಂದರ್ಭಗಳಲ್ಲಿಯೂ ಉತ್ಸಾಹದಿಂದ ನೌಕರರು ಪಾಲ್ಗೊಳ್ಳಬೇಕು. ಸೋಲು ಗೆಲುವಿನ ಲೆಕ್ಕಾಚಾರ ಬದಿಗಿರಿಸಿ ಕ್ರೀಡೆಯಲ್ಲಿ ಪಾಲ್ಗೊಳ್ಳುವುದೇ ಗೆಲುವು ಎಂದು ಭಾವಿಸಬೇಕು ಎಂದು ಜಿಲ್ಲಾಧಿಕಾರಿಯವರು ಸಲಹೆ ಮಾಡಿದರು. 
ನೌಕರರ ಕ್ರೀಡಾಕೂಟ ಏರ್ಪಡಿಸಲು ಜಿಲ್ಲಾ ನೌಕರರ ಸಂಘದ ಪದಾಧಿಕಾರಿಗಳೊಂದಿಗೆ ಚರ್ಚಿಸಲಾಗಿತ್ತು. ಬಹುದಿನಗಳ ನಂತರ ಎರಡು ದಿನಗಳ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆ ಆಯೋಜನೆಯಾಗಿದೆ. ನೌಕರರು ಭಾಗವಹಿಸಿ ಯಶಸ್ವಿಗೊಳಿಸಬೇಕು. ಎಲ್ಲಾ ಸ್ಪರ್ಧಿಗಳಿಗೂ ಶುಭವಾಗಲೆಂದು ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರು ಹಾರೈಸಿದರು. 
ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಕೇಂದ್ರ ಪರಿಹಾರ ಸಮಿತಿ ಅಧ್ಯಕ್ಷರಾದ ಎಂ. ರಾಮಚಂದ್ರ ಅವರು ಸರ್ಕಾರಿ ನೌಕರರು ಒತ್ತಡದಲ್ಲಿ ಕೆಲಸ ಮಾಡುವ ಸಂದರ್ಭ ಇರುತ್ತದೆ. ದಿನನಿತ್ಯದ ಒತ್ತಡ ಪರಿಹಾರಕ್ಕಾಗಿ ಕ್ರೀಡೆ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳು ಅಗತ್ಯ. ಇದಕ್ಕಾಗಿಯೇ ದೈಹಿಕ ಮತ್ತು ಮಾನಸಿಕ ಸದೃಢತೆಗಾಗಿ ಆಯೋಜಿಸಲಾಗುವ ಅವಕಾಶಗಳನ್ನು ಬಳಸಿಕೊಳ್ಳಬೇಕು ಎಂದರು. 
ಸೋಲು ಗೆಲುವನ್ನು ಸಮಾನಾಗಿ ಸ್ವೀಕರಿಸಿ. ಹಾಗೆಯೇ ಕೆಲಸದ ಸಮಯದಲ್ಲಿ ಸಾರ್ವಜನಿಕರಿಗೆ ಉತ್ತಮವಾಗಿ ಸ್ಪಂದಿಸಿ ಎಂದು ರಾಮಚಂದ್ರ ಅವರು ಕಿವಿಮಾತು ಹೇಳಿದರು.
ನಗರಸಭೆ ಅಧ್ಯಕ್ಷರಾದ ಆಶಾ ನಟರಾಜು ಅವರು ಮಾತನಾಡಿ ಎಲ್ಲಾ ವಯೋಮಾನದವರಿಗೂ ಕ್ರೀಡೆ ಅವಶ್ಯಕ. ಸ್ಪರ್ಧೆಯಲ್ಲಿ ವಿಜೇತರು ಬೀಗದೆ ಸೋತವರು ನಿರಾಶರಾಗದೇ ಎಲ್ಲರೂ ಕ್ರೀಡಾ ಮನೋಭಾವನೆ ಮೆರೆಯಬೇಕು. ಜಿಲ್ಲೆಗೆ ಕೀರ್ತಿ ತರಬೇಕು ಎಂದು ಆಶಿಸಿದರು. 
ಹೆಚ್ಚುವರಿ ಜಿಲ್ಲಾಧಿಕಾರಿ ಎಸ್. ಕಾತ್ಯಾಯಿನಿದೇವಿ ಅವರು ಮಾತನಾಡಿ ಕ್ರೀಡಾ ಕೂಟವನ್ನು ಬಿಸಿಲು ಝಳವಿರುವ ಬೇಸಿಗೆ ಸಮಯಕ್ಕಿಂತ ಸಾಧ್ಯವಾದಷ್ಟು ಡಿಸೆಂಬರ್ ಹಾಗೂ ಜನವರಿ ತಿಂಗಳಿನಲ್ಲಿ ಆಯೋಜನೆ ಮಾಡಿದರೆ ಒಳಿತು ಎನ್ನುವುದು ನನ್ನ ಅಭಿಪ್ರಾಯ. ಪ್ರಸ್ತುತ ಕ್ರೀಡಾಕೂಟವು ಯಶಸ್ವಿಯಾಗಲಿ ಎಂದು ಶುಭ ಕೋರಿದರು. 
ಸರ್ಕಾರಿ ನೌಕರರ ಸಂಘದ ಜಿಲ್ಲಾ ಅಧ್ಯಕ್ಷರಾದ ಚಂದ್ರಶೇಖರ್ ಮಾತನಾಡಿ ಎರಡು ದಿನಗಳ ಕಾಲ ನಡೆಯುವ ಕ್ರೀಡಾ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ನೌಕರ ಸಹದ್ಯೋಗಿಗಳು ಹಬ್ಬದಂತೆ ಸಂಭ್ರಮಿಸಿ ಪಾಲ್ಗೊಳ್ಳಬೇಕು. ಸರ್ಕಾರ ನೌಕರರ ಹಿತಕ್ಕಾಗಿ ಸಾಕಷ್ಟು ಸೌಲಭ್ಯಗಳನ್ನು ಕಲ್ಪಿಸುತ್ತಿದೆ ಎಂದರು. 
ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಪಿ.ಬಿ. ಶಾಂತಮೂರ್ತಿ ಕುಲಗಾಣ ರವರು ಕ್ರೀಡಾಜ್ಯೋತಿ ಸ್ವೀಕಾರ ಮಾಡಿದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಟಿ.ಪಿ ಶಿವಕುಮಾರ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಕೆ.ಎಂ. ವಿಶ್ವೇಶ್ವರಯ್ಯ, ಅಬಕಾರಿ ಉಪ ಆಯುಕ್ತರಾದ ಮುರಳಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೆಶಕರಾದ ಆರ್. ಅನಿತಾ, ಜಿಲ್ಲಾ ಪಂಚಾಯತ್ ಲೆಕ್ಕಾಧಿಕಾರಿ ಗಂಗಾಧರ್, ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಶಾಖೆಯ ಪ್ರಧಾನ ಕಾರ್ಯದರ್ಶಿ ಎಸ್. ಮಹದೇವಸ್ವಾಮಿ, ವಿ. ಮಹದೇವಯ್ಯ, ಎಸ್. ಮಹದೇವಯ್ಯ ಸೇರಿದಂತೆ ಪದಾಧಿಕಾರಿಗಳು ಉಪಸ್ಥಿತರಿದ್ದರು.