ಚಾಮರಾಜನಗರ: ಕೋವಿಡ್-೧೯ ವೈರಾಣು ಸೋಂಕು ಹರಡದಂತೆ ತಡೆಯಲು ಮುನ್ನೆಚ್ಚರಿಕೆ ಕ್ರಮವಾಗಿ ೧೫ರಿಂದ ೧೮ ವರ್ಷ ವಯಸ್ಸಿನ ಮಕ್ಕಳಿಗೆ ಕೋವಿಡ್ ಲಸಿಕೆ ನೀಡುವ ಕಾರ್ಯಕ್ರಮಕ್ಕೆ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಅವರು ಇಂದು ಚಾಲನೆ ನೀಡಿದರು.
ನಗರದ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ (ಪ್ರೌಢಶಾಲಾ ವಿಭಾಗ), ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಕಿರಿಯರಿಗಾಗಿ ಕೋವ್ಯಾಕ್ಸಿನ್ ಲಸಿಕೆ-ಕೋವಿಡ್-೧೯ನಿಂದ ಸುರಕ್ಷೆ ಕಾರ್ಯಕ್ರಮವನ್ನು ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಅವರು ದೀಪ ಬೆಳಗುವ ಮೂಲಕ ಉದ್ಘಾಟಿಸಿದರು.
ಕೋವಿಡ್-೧೯ರ ಒಮಿಕ್ರಾನ್ ವೈರಾಣು ಹರಡದಂತೆ ಮುನ್ನೆಚ್ಚರಿಕೆಯಾಗಿ ರಾಜ್ಯಾದ್ಯಂತ ೧೫ರಿಂದ ೧೮ ವರ್ಷ ವಯಸ್ಸಿನ ಮಕ್ಕಳಿಗೆ ಕೋವಿಡ್ ಲಸಿಕೆ ನೀಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಕೋವಿಡ್ ೨ನೇ ಅಲೆಯಲ್ಲಿ ಜಿಲ್ಲೆಯಲ್ಲಿ ನಡೆದ ಘಟನೆ ಇನ್ನೂ ಅಚ್ಚ ಹಸಿರಾಗಿದೆ. ಮುಂದಿನ ದಿನಗಳಲ್ಲಿ ೩ನೇ ಅಲೆ ಬರುವ ಸಂಭವವನ್ನು ಪ್ರಾಥಮಿಕ ಹಂತದಲ್ಲಿಯೇ ತಡೆಯುವ ಸಲುವಾಗಿ ಎಲ್ಲರೂ ಕೋವಿಡ್ ಲಸಿಕೆ ಹಾಕಿಸಿಕೊಳ್ಳಬೇಕು ಎಂದರು.
ಕೋವಿಡ್ ನೆಪ ಹೇಳಿ ಜಿಲ್ಲೆಯ ಅಭಿವೃದ್ದಿ ಯೋಜನೆ, ಕಾರ್ಯಕ್ರಮಗಳಲ್ಲಿ ನಿರ್ಲಕ್ಷ್ಯ ತೋರದೇ ಇಲಾಖೆಯ ಕೆಲಸಗಳ ಜೊತೆಗೆ ಕೋವಿಡ್ ಲಸಿಕಾಕರಣ ಕಾರ್ಯದಲ್ಲಿ ಎಲ್ಲಾ ಅಧಿಕಾರಿಗಳು ಸಕ್ರಿಯವಾಗಿ ತೊಡಗಿಸಿಕೊಂಡು ನಿಗದಿತ ಗುರಿ ಸಾಧಿಸುವಲ್ಲಿ ಯಶಸ್ವಿಯಾಗಬೇಕು. ಎಲ್ಲರೂ ಮಾಸ್ಕ್ ಧರಿಸಬೇಕು. ಸಾಮಾಜಿಕ ಅಂತರ ಕಾಪಾಡಿಕೊಳ್ಳುವ ಮೂಲಕ ಜೀವರಕ್ಷಣೆ ಮಾಡಿಕೊಳ್ಳಬೇಕು ಎಂದು ಶಾಸಕರು ತಿಳಿಸಿದರು.
ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಶಾಂತಮೂರ್ತಿ ಕುಲಗಾಣ ಅವರು ಇಡೀ ಮನುಕುಲ ಕೋವಿಡ್‌ನಿಂದ ಸಾಕಷ್ಟು ತೊಂದರೆಗೀಡಾಗಿದೆ. ಕೋವಿಡ್ ೨ನೇ ಅಲೆಯಲ್ಲಿ ನಮ್ಮ ಕಣ್ಣೇದುರು ಇದ್ದ ಅನೇಕರನ್ನು ಕಳೆದುಕೊಂಡಿದ್ದೇವೆ. ಇದಕ್ಕೆ ನಮ್ಮಲ್ಲಿನ ಅಜಾಗರೂಕತೆಯೇ ಕಾರಣವಾಗಿದೆ. ಲಸಿಕೆಯಿಂದ ಮಾನಸಿಕ ದೃಢತೆ ಹೆಚ್ಚಾಗುತ್ತದೆ. ಈ ನಿಟ್ಟಿನಲ್ಲಿ ಪ್ರತಿಯೊಬ್ಬರು ಲಸಿಕೆ ಹಾಕಿಸಿಕೊಳ್ಳಬೇಕು ಎಂದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಕೆ.ಎಂ. ವಿಶ್ವೇಶ್ವರಯ್ಯ ಅವರು ಪ್ರಾಸ್ತಾವಿಕವಾಗಿ ಮಾತನಾಡಿ ಇಂದಿನಿಂದ ೧೫ರಿಂದ ೧೮ ವರ್ಷ ವಯಸ್ಸಿನ ಮಕ್ಕಳಿಗೆ ಕೋವಿಡ್ ಲಸಿಕೆ ನೀಡುವ ಕಾರ್ಯಕ್ರಮ ಹಾಕಿಕೊಳ್ಳಲಾಗಿದ್ದು, ಜಿಲ್ಲೆಯಲ್ಲಿ ಒಟ್ಟು ೨೩೦ ಶಾಲೆಗಳ ೪೫೪೭೪ ಮಕ್ಕಳಿಗೆ ಲಸಿಕೆ ನೀಡುವ ಗುರಿ ಹೊಂದಲಾಗಿದ್ದು, ಈ ಪೈಕಿ ೨೫೮೪೩ ಪ್ರೌಢಶಾಲಾ ಮಕ್ಕಳು, ೧೫೧೬೬ ಪದವಿ ಪೂರ್ವ ಕಾಲೇಜು, ೬೮೫ ಐ.ಟಿ.ಐ ಹಾಗೂ ೫೮ ನರ್ಸಿಂಗ್ ಶಾಲೆಯ ವಿದ್ಯಾರ್ಥಿನಿಯರು ಸೇರಿದ್ದಾರೆ. ಅಲ್ಲದೆ ಶಾಲೆಯಿಂದ ಹೊರಗುಳಿದ ೩೭೨೨ ಮಕ್ಕಳನ್ನು ಸಹ ಕೋವಿಡ್ ಲಸಿಕೆ ನೀಡಲು ಪರಿಗಣಿಸಲಾಗಿದೆ ಎಂದರು.
ನಗರಸಭೆ ಅಧ್ಯಕ್ಷರಾದ ಸಿ.ಎಂ. ಆಶಾ, ಜಿಲ್ಲಾಧಿಕಾರಿ ಚಾರುಲತಾ ಸೋಮಲ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಎಂ. ಗಾಯತ್ರಿ, ಹೆಚ್ಚುವರಿ ಜಿಲ್ಲಾಧಿಕಾರಿ ಎಸ್. ಕಾತ್ಯಾಯಿನಿದೇವಿ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕೆ.ಎಸ್. ಸುಂದರರಾಜ್, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಮಂಜುನಾಥ್, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ನಾಗಮಲ್ಲೇಶ್, ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಪ್ರೇಮ್‌ಕುಮಾರ್, ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಮರಿಸ್ವಾಮಿ, ಉಪ ಪ್ರಾಂಶುಪಾಲರಾದ ನಂಜುಂಡಸ್ವಾಮಿ, ಕ್ಷೇತ್ರ ಶಿಕ್ಷಣಾಧಿಕಾರಿ ಸೋಮಣ್ಣೇಗೌಡ, ಇತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.