ಚಾಮರಾಜನಗರ: ಸಾರ್ವಜನಿಕರ ಸುರಕ್ಷತೆ ಮತ್ತು ಆರೋಗ್ಯದ ಹಿತದೃಷ್ಠಿಯಿಂದ ಕೋವಿಡ್-೧೯ರ ಒಮಿಕ್ರಾನ್ ವೈರಸ್ ಹರಡದಂತೆ ಮುನ್ನೆಚ್ಚರಿಕೆ ಕ್ರಮವಾಗಿ ವಿಪತ್ತು ನಿರ್ವಹಣಾ ಕಾಯ್ದೆ ೨೦೦೫ರ ಮತ್ತು ಕರ್ನಾಟಕ ಸಾಂಕ್ರಮಿಕ ರೋಗಗಳ ಕೋವಿಡ್-೧೯ ರೆಗ್ಯುಲೇಷನ್ಸ್ ೨೦೨೦ ಸೆಕ್ಷನ್ ೧೨(೩) ರಂತೆ ಜಿಲ್ಲಾ ವ್ಯಾಪ್ತಿಯಲ್ಲಿ ಬರುವ ಎಲ್ಲಾ ದೇವಾಲಯಗಳಲ್ಲಿ ಸಂಕ್ರಾಂತಿ ಹಬ್ಬದ ಪ್ರಯುಕ್ತ ದೇವರ ದರ್ಶನಕ್ಕೆ ಮಾತ್ರ ಅವಕಾಶ ಕಲ್ಪಿಸಿ ಉಳಿದ ಎಲ್ಲಾ ರೀತಿಯ ಸೇವೆಗಳು ಮತ್ತು ಎಲ್ಲಾ ರೀತಿಯ ಜಾತ್ರೆಗಳು, ಧಾರ್ಮಿಕ ಸಭೆ ಸಮಾರಂಭಗಳನ್ನು ನಿಷೇಧಿಸಿ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರು ಆದೇಶ ಹೊರಡಿಸಿದ್ದಾರೆ.
ಕೋವಿಡ್-೧೯ ನಿರ್ವಹಣೆಯ ಕ್ರಮಗಳನ್ನು ಮತ್ತು ರಾಷ್ಟ್ರೀಯ ನಿರ್ದೇಶನಗಳನ್ನು ಉಲ್ಲಂಘಿಸುವ ಯಾವುದೇ ವ್ಯಕ್ತಿ ವಿರುದ್ದ ವಿಪತ್ತು ನಿರ್ವಹಣಾ ಕಾಯ್ದೆ ೨೦೦೫ರ ಸೆಕ್ಷನ್ ೫೧ ರಿಂದ ೬೦ರ ಉಪಬಂಧಗಳು ಭಾರತೀಯ ದಂಡ ಸಂಹಿತೆ ಸೆಕ್ಷನ್ ೧೮೮ರ ಅಡಿಯಲ್ಲಿನ ಕಾನೂನು ಕ್ರಮ ಮತ್ತು ಅನ್ವಯವಾಗಬಹುದಾದ ಇತರೆ ಕಾನೂನು ಉಪಬಂಧಗಳ ಮೇರೆಗೆ ಕ್ರಮ ಜರುಗಿಸಲಾಗುವುದೆಂದು ಜಿಲ್ಲಾಧಿಕಾರಿಯವರು ಆದೇಶದಲ್ಲಿ ತಿಳಿಸಿದ್ದಾರೆ.