ಚಾಮರಾಜನಗರ:ಜನರ ಸಮಸ್ಯೆಗಳನ್ನು ಖುದ್ದಾಗಿ ಆಲಿಸಿ ಪರಿಹಾರ ನೀಡುವ ಕಾರ್ಯಕ್ಕೆ ಮುಂದಾಗುವಂತೆ ಕರ್ನಾಟಕ ರಾಜ್ಯ ಖನಿಜ ನಿಗಮದ ವ್ಯವಸ್ಥಾಪಕ ನಿರ್ದೇಶಕರು ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಯವರಾದ ಬಿ.ಬಿ.ಕಾವೇರಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಂದು ನಡೆದ ಜಿಲ್ಲೆಯ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಈ ಬಾರಿ ಜಿಲ್ಲೆಯಲ್ಲಿ ಉತ್ತಮ ಮಳೆಯಾಗಿದೆ. ಕೆಲವೆಡೆ ಅಧಿಕ ಮಳೆ-ಗಾಳಿಯಿಂದ ಬೆಳೆಹಾನಿಯಾಗಿದೆ. ಬೆಳೆ ಪರಿಹಾರ ನೀಡುವ ಸಂಬಂಧ ಯಾವುದೇ ಅರ್ಜಿಗಳನ್ನು ಬಾಕಿ ಉಳಿಸಿಕೊಳ್ಳದೇ ಸಮರ್ಪಕವಾಗಿ ವಿಲೇವಾರಿಯಾಗಬೇಕು. ರೈತರಿಗೆ ಬಿತ್ತನೆ ಬೀಜ, ರಸಗೊಬ್ಬರ ಪೂರೈಕೆಯಲ್ಲಿ ಕೊರತೆಯಾಗದಂತೆ ದಾಸ್ತಾನು ಮಾಡಿಕೊಳ್ಳಬೇಕು. ಬೆಳೆ ಸರ್ವೇ ಕಾರ್ಯದ ಪ್ರಗತಿ ಹೆಚ್ಚಿಸುವಂತೆ ರೈತರು ಹಾಗೂ ಪಿ.ಆರ್ ಅವರುಗಳ ಮನವೊಲಿಸಬೇಕು ಎಂದು ತಿಳಿಸಿದರು.
ಅರಣ್ಯ ಹಕ್ಕು ಕಾಯ್ದೆಯಡಿ ಕೊಳ್ಳೇಗಾಲ ಹೊರತುಪಡಿಸಿ ಉಳಿದ ತಾಲೂಕುಗಳು ನಿರೀಕ್ಷೀತ ಪ್ರಗತಿ ಸಾಧಿಸಿವೆ. ಕೊಳ್ಳೆಗಾಲ ತಾಲೂಕಿನಲ್ಲಿ ೧೪೬೧ ಹಕ್ಕುಪತ್ರಗಳನ್ನು ವಿತರಿಸಿದ್ದು, ಅರಣ್ಯ ಇಲಾಖೆಯೊಂದಿಗೆ ಸಮನ್ವಯ ಸಾಧಿಸಿ ತಿರಸ್ಕೃತಗೊಂಡಿರುವ ಅರ್ಜಿಗಳನ್ನು ಮರುಪರಿಶೀಲಿಸಿ ಅವಶ್ಯವಿದ್ದರೆ ಪ್ರಸ್ತಾವನೆ ಸಲ್ಲಿಸುವಂತೆ ತಹಶೀಲ್ದಾರರಿಗೆ ನಿರ್ದೇಶನ ನೀಡಿದರು.
ಜಿಲ್ಲೆಯಲ್ಲಿ ಸರ್ಕಾರಿ ಜಮೀನು, ಸ್ಮಶಾನ ಹಾಗೂ ಕೆರೆಗಳ ಒತ್ತುವರಿಯನ್ನು ತೆರವುಗೊಳಿಸುವ ಕಾರ್ಯ ಚುರುಕಾಗಬೇಕು. ಪೋಡಿ ಪ್ರಕರಣಗಳ ಇತ್ಯರ್ಥಕ್ಕೆ ಸೂಕ್ತ ಮಾನದಂಡಗಳನ್ನು ಅನುಸರಿಸಬೇಕು. ಭೂ ಮಾಪಕರು ನಿಗದಿಗೊಳಿಸಿರುವ ಸರ್ವೇ ಕಾರ್ಯವನ್ನು ಕ್ರಮಬದ್ಧವಾಗಿ ಮಾಡಬೇಕು. ಕೋವಿಡ್ ಸಂತ್ರಸ್ಥರಿಗೆ ಪರಿಹಾರ ವಿತರಣೆಯಲ್ಲಿ ವಿಳಂಬವಾಗಬಾರದು. ಜನರ ಬೇಡಿಕೆಗನುಗುಣವಾಗಿ ಮೂಲಸೌಲಭ್ಯ ವಂಚಿತ ಹಳ್ಳಿಗಳನ್ನು ಕಂದಾಯ ಗ್ರಾಮಗಳನ್ನಾಗಿ ಪರಿವರ್ತಿಸಲು ಸರ್ಕಾರವೇ ಆದ್ಯತೆ ನೀಡಿದ್ದು, ಈ ನಿಟ್ಟಿನಲ್ಲಿ ಎಲ್ಲಾ ತಾಲೂಕು ತಹಶೀಲ್ದಾರರು ಕ್ರಿಯಾಶೀಲರಾಗಬೇಕು ಎಂದು ತಿಳಿಸಿದರು.
ಜಿಲ್ಲೆಯ ನಗರ, ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಬರುವ ಚಾಮರಾಜನಗರ ಹಾಗೂ ಕೊಳ್ಳೇಗಾಲ ನಗರಸಭೆಗಳಲ್ಲಿ ಸಾಕಷ್ಟು ಸಕಾಲ ಅರ್ಜಿಗಳು ಬಾಕಿ ಇದ್ದು, ಸಕಾಲ ಅರ್ಜಿಗಳನ್ನು ಪ್ರಥಮಾಧ್ಯತೆ ಮೇರೆಗೆ ತ್ವರಿತವಾಗಿ ಪೂರ್ಣಗೊಳಿಸಬೇಕು. ಅರ್ಜಿಗಳ ವಿಲೇವಾರಿಗಾಗಿ ಜಿಲ್ಲಾ ನಗರಾಭಿವೃದ್ಧಿ ಕೋಶ ಅವಶ್ಯ ಜವಾಬ್ದಾರಿಯುತ ಮಾರ್ಗದರ್ಶನ ನೀಡಬೇಕು ಎಂದರು.
ಕೋವಿಡ್ ಲಸಿಕೆಗೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ ಮೊದಲ ಡೋಸ್ ನೀಡಿಕೆಯಲ್ಲಿ ಶೇ. ೧೦೦ ಹಾಗೂ ಶೇ ೯೮ರಷ್ಟು ಎರಡನೇ ಡೋಸ್ ಲಸಿಕೆ ನೀಡಲಾಗಿದೆ. ಮುಂಜಾಗ್ರತೆ (ಪ್ರಿಕಾಶನ್) ಡೋಸ್ ಅನ್ನು ಜಿಲ್ಲೆಯಲ್ಲಿ ಈಗಾಗಲೇ ೧೫೫೧೯ ಜನರಿಗೆ ನೀಡಲಾಗಿದ್ದು, ಮುಂದಿನ ದಿನಗಳಲ್ಲಿ ಕೋವಿಡ್ ೪ನೇ ಅಲೆ ತಡೆಗಾಗಿ ಅಗತ್ಯ ಸಿದ್ದತೆ ಕೈಗೊಳ್ಳಲು ಜಿಲ್ಲಾಡಳಿತ ಹಾಗೂ ಆರೋಗ್ಯ ಇಲಾಖೆ ಸನ್ನದ್ಧವಾಗುವಂತೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಯವರಾದ ಬಿ.ಬಿ. ಕಾವೇರಿ ಅವರು ತಿಳಿಸಿದರು.
ಜಿಲ್ಲಾಧಿಕಾರಿ ಚಾರುಲತಾ ಸೋಮಲ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಎಂ. ಗಾಯತ್ರಿ, ಹೆಚ್ಚುವರಿ ಜಿಲ್ಲಾಧಿಕಾರಿ ಎಸ್. ಕಾತ್ಯಾಯಿನಿದೇವಿ, ಬಿ.ಆರ್.ಟಿ ಹುಲಿ ಸಂರಕ್ಷಿತ ಪ್ರದೇಶದ ಉಪ ಅರಣ್ಯ ಸಂರಕ್ಷಣಾಧಿಕಾರಿ ಸಂತೋಷ್‌ಕುಮಾರ್, ತಹಶೀಲ್ದಾರರಾದ ಚಿದಾನಂದ ಗುರುಸ್ವಾಮಿ, ರವಿಶಂಕರ್, ಮಂಜುಳ, ವ್ಯದ್ಯಕೀಯ ವಿಜ್ಞಾನಗಳ ಸಂಸ್ಥೆಯ ಡೀನ್. ಡಾ. ಸಂಜೀವ್, ಜಿಲ್ಲಾ ಆರೋಗ್ಯಾಧಿಕಾರಿ ಡಾ. ಕೆ.ಎಂ.ವಿಶ್ವೇಶ್ವರಯ್ಯ ಸೇರಿದಂತೆ ಜಿಲ್ಲಾಮಟ್ಟದ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.