ಚಾಮರಾಜನಗರ: ಜಿಲ್ಲೆಯಲ್ಲಿ ಇದೇ ಮಾರ್ಚ್ ೨೮ರಿಂದ ಏಪ್ರಿಲ್ ೧೧ ರವರೆಗೆ ನಡೆಯಲಿರುವ ಎಸ್.ಎಸ್.ಎಲ್.ಸಿ ಪರೀಕ್ಷಾ ಕಾರ್ಯವನ್ನು ಯಾವುದೇ ಅಕ್ರಮಕ್ಕೆ ಅವಕಾಶವಿಲ್ಲದಂತೆ ಪಾರದರ್ಶಕವಾಗಿ ನಿರ್ವಹಿಸಬೇಕೆಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಎಂ. ಗಾಯತ್ರಿ ಅವರು ಸೂಚನೆ ನೀಡಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಂದು ಕ್ಷೇತ್ರ ಶಿಕ್ಷಣಾಧಿಕಾರಿಗಳು, ನೋಡಲ್ ಅಧಿಕಾರಿಗಳು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳ ಜೊತೆ ನಡೆದ ಎಸ್.ಎಸ್.ಎಲ್.ಸಿ ಪರೀಕ್ಷಾ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿ ಒಟ್ಟು ೫ ತಾಲೂಕಿನಲ್ಲಿ ೬೩ ಪರೀಕ್ಷಾ ಕೇಂದ್ರಗಳು ಇರಲಿವೆ. ೫೯೬೭ ಬಾಲಕಿಯರು, ೬೩೦೪ ಬಾಲಕರು ಸೇರಿದಂತೆ ಒಟ್ಟು ೧೨೨೭೧ ವಿದ್ಯಾರ್ಥಿಗಳು ಎಸ್.ಎಸ್.ಎಲ್.ಸಿ ಪರೀಕ್ಷೆಗೆ ನೊಂದಾಯಿಸಿಕೊಂಡಿದ್ದಾರೆ. ಪರೀಕ್ಷಾ ಕಾರ್ಯವನ್ನು ಅತ್ಯಂತ ಗಂಭೀರವಾಗಿ ತೆಗೆದುಕೊಂಡು ಯಾವುದೇ ಲೋಪಗಳಿಗೆ ಅವಕಾಶವಾಗದಂತೆ ಕಾರ್ಯ ನಿರ್ವಹಿಸಬೇಕೆಂದು ಜಿಲ್ಲಾಧಿಕಾರಿಯವರು ತಿಳಿಸಿದರು.
ಪರೀಕ್ಷೆಯನ್ನು ಪಾರದರ್ಶಕವಾಗಿ ಮತ್ತು ವ್ಯವಸ್ಥಿತವಾಗಿ ನಡೆಸುವ ಸಂಪೂರ್ಣ ಜವಾಬ್ದಾರಿ ಪರೀಕ್ಷಾ ಕೇಂದ್ರದ ಮುಖ್ಯ ಅಧೀಕ್ಷಕರದ್ದಾಗಿರುತ್ತದೆ. ಪರೀಕ್ಷಾ ಕೇಂದ್ರದಲ್ಲಿ ಅಗತ್ಯ ಮೂಲ ಸೌಕರ್ಯಗಳನ್ನು ಕಲ್ಪಿಸಿರುವ ಬಗ್ಗೆ ಖಾತರಿ ಪಡಿಸಿಕೊಳ್ಳಬೇಕು. ಪ್ರತೀ ಪರೀಕ್ಷಾ ಕೇಂದ್ರದಲ್ಲಿ ಕನಿಷ್ಠ ೪ ಸಿಸಿ ಕ್ಯಾಮಾರಗಳು ಕಾರ್ಯ ನಿರ್ವಹಣಾ ಸ್ಥಿತಿಯಲ್ಲಿ ಇರಬೇಕು ಎಂದರು.
ಪರೀಕ್ಷಾ ಸಿಬ್ಬಂದಿ ಪರೀಕ್ಷಾ ಗೌಪ್ಯತೆ ಮತ್ತು ಪಾವಿತ್ರ್ಯತೆ ಕಾಪಾಡಿಕೊಳ್ಳಬೇಕು. ಪರೀಕ್ಷಾ ಕಾರ್ಯಕ್ಕೆ ಸಂಬಂಧಿಸಿದ ದಾಖಲೆಗಳನ್ನು ಸಮರ್ಪಕವಾಗಿ ನಿರ್ವಹಣೆ ಮಾಡಬೇಕು. ವಿದ್ಯಾರ್ಥಿಗಳ ಆಸನ ವ್ಯವಸ್ಥೆಯ ವಿವರಗಳನ್ನು ಪ್ರಕಟಣಾ ಫಲಕದಲ್ಲಿ ಪ್ರಕಟಿಸಬೇಕು. ಪರೀಕ್ಷಾ ಮಾರ್ಗಸೂಚಿಯನ್ನು ಮನನ ಮಾಡಿಕೊಂಡು ಆ ಪ್ರಕಾರವೇ ಅನುಪಾಲನೆ ಮಾಡಬೇಕು ಎಂದು ಜಿಲ್ಲಾಧಿಕಾರಿಯವರು ಸೂಚಿಸಿದರು.
ವಿದ್ಯಾರ್ಥಿಗಳ ಸುರಕ್ಷತೆಗಾಗಿ ಎಸ್.ಒ.ಪಿ ಯನ್ನು ಪರಿಪಾಲಿಸಬೇಕು. ಮಾಸ್ಕ್ ಧರಿಸಬೇಕು, ಕೋವಿಡ್ ನಿಯಮ ಅನುಸರಿಸಬೇಕು. ಪರೀಕ್ಷಾ ಕೇಂದ್ರದಲ್ಲಿ ಥರ್ಮಲ್ ಸ್ಕ್ಯಾನರ್, ಪ್ರಥಮ ಚಿಕಿತ್ಸಾ ಪೆಟ್ಟಿಗೆ, ವಿಶೇಷ ಕೊಠಡಿಗಳ ವ್ಯವಸ್ಥೆ ಇರಬೇಕು. ವಿಶೇಷ ಅಗತ್ಯವುಳ್ಳ ವಿದ್ಯಾರ್ಥಿಗಳಿಗೆ ಅಗತ್ಯ ಸೌಲಭ್ಯ ಅವಕಾಶಗಳನ್ನು ಕಲ್ಪಿಸಬೇಕು. ಒಟ್ಟಾರೆ ಪರೀಕ್ಷಾ ಕಾರ್ಯವು ಸುಗಮವಾಗಿ ನಡೆಯಲು ಅಗತ್ಯವಿರುವ ಎಲ್ಲಾ ಸಿದ್ದತೆಗಳನ್ನು ಪೂರ್ಣಗೊಳಿಸಿ ಯಶಸ್ವಿಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಕೆ.ಎಂ. ಗಾಯತ್ರಿ ಅವರು ತಿಳಿಸಿದರು.
ಹೆಚ್ಚುವರಿ ಜಿಲ್ಲಾಧಿಕಾರಿ ಎಸ್. ಕಾತ್ಯಾಯಿನಿದೇವಿ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಮಂಜುನಾಥ್, ಶಿಕ್ಷಣ ಇಲಾಖೆಯ ವಿವಿಧ ಹಂತದ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.