ಚಾಮರಾಜನಗರ: ಜಿಲ್ಲೆಯಲ್ಲಿ ರಸ್ತೆ ಅಪಘಾತಗಳು ತಡೆಗಟ್ಟಲು ಹಾಗೂ ಸುಗಮ ಸಂಚಾರ ವ್ಯವಸ್ಥೆಗಾಗಿ ಪೂರಕವಾಗಿರುವ ಸಮಗ್ರ ಕ್ರಿಯಾ ಯೋಜನೆಯನ್ನು ತಯಾರಿಸಿ ಸಲ್ಲಿಸುವಂತೆ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರು ಸೂಚನೆ ನೀಡಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಂದು ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿ ರಸ್ತೆ ಅಪಘಾತಗಳನ್ನು ತಡೆಗಟ್ಟಲು ಮತ್ತು ಸಂಚಾರ ವ್ಯವಸ್ಥೆ ಸುಗಮವಾಗಿರಲು ಕೈಗೊಳ್ಳಬೇಕಿರುವ ಕ್ರಮಗಳ ಕುರಿತು ವಿವಿಧ ಇಲಾಖೆಗಳನ್ನೊಳಗೊಂಡ ಅಧಿಕಾರಿಗಳ ತಂಡ ಕ್ರಮ ತೆಗೆದುಕೊಳ್ಳಬೇಕಿದೆ. ರಸ್ತೆ ಅಪಘಾತಗಳು ಸಂಭವಿಸುತ್ತಿರುವುದಕ್ಕೆ ವೈಜ್ಞಾನಿಕ ಕಾರಣಗಳನ್ನು ತಿಳಿಯಬೇಕಿದೆ. ಈ ನಿಟ್ಟಿನಲ್ಲಿ ಲೋಕೋಪಯೋಗಿ, ಪೊಲೀಸ್, ಆರೋಗ್ಯ, ಸಾರಿಗೆ ಇಲಾಖೆ ಅಧಿಕಾರಿಗಳ ತಂಡ ಕ್ರಮವಹಿಸಬೇಕಿದೆ ಎಂದರು.
ಸಾರ್ವಜನಿಕರಲ್ಲಿ, ವಿದ್ಯಾರ್ಥಿಗಳಲ್ಲಿ ರಸ್ತೆ ಸುರಕ್ಷತೆ ಬಗ್ಗೆ ಹೆಚ್ಚಿನ ಅರಿವು ಮೂಡಿಸಬೇಕಿದೆ. ಎಲ್ಲಾ ಬಗೆಯ ವಾಹನಗಳಲ್ಲಿ ದಾಖಲಾತಿಗಳನ್ನು ಕ್ರಮಬದ್ದವಾಗಿ ಇಟ್ಟುಕೊಳ್ಳುವ ಕುರಿತು ಜಾಗೃತಿ ಉಂಟು ಮಾಡಬೇಕಿದೆ. ಈ ನಿಟ್ಟಿನಲ್ಲಿ ಸೂಕ್ತ ಕಾರ್ಯಕ್ರಮಗಳನ್ನು ಆಯೋಜಿಸುವಂತೆ ಜಿಲ್ಲಾಧಿಕಾರಿಯವರು ತಿಳಿಸಿದರು.
ಪ್ರಮುಖ ಹೆದ್ದಾರಿ, ಮುಖ್ಯ ರಸ್ತೆಗಳಲ್ಲಿ ಸಂಚಾರ ನಿಯಮಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ಸಂಬಂಧ ಕೈಗೊಳ್ಳಬೇಕಿರುವ ಎಂಜಿನಿಯರಿಂಗ್ ಚಟುವಟಿಕೆಗಳ ಬಗ್ಗೆ ವಿವರ ಪಡೆದ ಜಿಲ್ಲಾಧಿಕಾರಿಯವರು ಈ ಸಂಬಂಧ ಅಗತ್ಯ ಕ್ರಮಗಳಿಗೆ ಮುಂದಾಗಬೇಕಿದೆ ಎಂದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಟಿ.ಪಿ. ಶಿವಕುಮಾರ್ ಅವರು ಮಾತನಾಡಿ ರಸ್ತೆ ಅಪಘಾತಗಳ ತಡೆಗೆ ಹಾಗೂ ಸುಗಮ ಸಂಚಾರ ನಿರ್ವಹಣೆಗೆ ಅಳವಡಿಸಬೇಕಿರುವ ಕ್ರಮಗಳ ಕುರಿತು ವಿವರಿಸಿದರು.
ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಎಸ್. ಸುಂದರ್‌ರಾಜ್, ಪ್ರಾದೇಶಿಕ ಸಾರಿಗೆ ಅಧಿಕಾರಿ ಭೀಮನಗೌಡ ಪಾಟೀಲ್, ಡಿವೈಎಸ್‌ಪಿ ಪ್ರಿಯದರ್ಶಿನಿ ಸಾಣೆಕೊಪ್ಪ, ಜಿಲ್ಲಾ ನಗರಾಭಿವೃದ್ದಿ ಕೋಶದ ಯೋಜನಾ ನಿರ್ದೇಶಕರಾದ ಕೆ. ಸುರೇಶ್, ನಗರಸಭೆ ಆಯುಕ್ತರಾದ ಕರಿಬಸವಯ್ಯ, ನಂಜುಂಡಸ್ವಾಮಿ ಇನ್ನಿತರ ಇಲಾಖೆಯ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.
