ಚಾಮರಾಜನಗರ: ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಹಾಗೂ ತಂಬಾಕು ಉತ್ಪನ್ನಗಳ ಸೇವನೆ ನಿಷೇಧ ಕುರಿತು ಜಾಗೃತಿ ಮೂಡಿಸುವ ಜೊತೆಗೆ ವಿಶೇಷವಾಗಿ ಪ್ರವಾಸಿ ತಾಣಗಳನ್ನು ತಂಬಾಕು ಮುಕ್ತ ವೆಂದು ಘೋಷಿಸುವ ನಿಟ್ಟಿನಲ್ಲಿ ಕ್ರಮವಹಿಸುವಂತೆ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರು ಸೂಚನೆ ನೀಡಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಂದು ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದ ಜಿಲ್ಲಾ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮತ್ತು ತಂಬಾಕು ಉತ್ಪನ್ನಗಳನ್ನು ಸೇವನೆಯನ್ನು ನಿಷೇಧಿಸಿರುವ ಕುರಿತು ವ್ಯಾಪಕವಾಗಿ ಅರಿವು ಉಂಟು ಮಾಡಬೇಕಿದೆ. ಪ್ರವಾಸೋದ್ಯಮ ಇಲಾಖೆ ವತಿಯಿಂದ ಜಿಲ್ಲೆಯಲ್ಲಿರುವ ಎಲ್ಲಾ ಪ್ರವಾಸಿ ತಾಣಗಳಲ್ಲಿ ಧೂಮಪಾನ ಮತ್ತು ಜಗಿಯುವ ತಂಬಾಕು ಉತ್ಪನ್ನಗಳ ಸೇವನೆ ನಿಷೇಧ ಕುರಿತು ಫಲಕಗಳನ್ನು ಪ್ರದರ್ಶಿಸಬೇಕು. ಪ್ರವಾಸಿ ಸ್ಥಳಗಳನ್ನು ತಂಬಾಕು ಮುಕ್ತ ಪ್ರವಾಸಿ ತಾಣಗಳೆಂದು ಘೋಷಿಸಲು ಪೂರಕವಾಗಿರುವ ಕ್ರಮಗಳನ್ನು ಅನುಷ್ಠಾನಮಾಡಬೇಕು ಎಂದು ಜಿಲ್ಲಾಧಿಕಾರಿಯವರು ತಿಳಿಸಿದರು.
ಅರಣ್ಯ ಪ್ರದೇಶಗಳಲ್ಲಿಯೂ ಧೂಮಪಾನ ಹಾಗೂ ತಂಬಾಕು ಉತ್ಪನ್ನಗಳ ನಿಷೇಧ ಸಂಬಂಧ ಅರಿವು ಮೂಡಿಸಬೇಕು. ಅರಣ್ಯ ಪ್ರದೇಶಗಳಲ್ಲಿ ಧೂಮಪಾನ ನಿಷೇಧದ ಫಲಕಗಳನ್ನು ಹಾಕಬೇಕು. ಅರಣ್ಯ ಭಾಗದ ಸ್ಥಳಗಳಲ್ಲಿ ಧೂಮಪಾನ, ತಂಬಾಕು ಸೇವಿಸುವವರ ವಿರುದ್ದ ಪ್ರಕರಣ ದಾಖಲಿಸಬೇಕು ಎಂದರು.
ಕೆ.ಎಸ್.ಆರ್.ಟಿ.ಸಿ. ನಿಗಮದ ಬಸ್‌ಗಳಲ್ಲಿ ಧೂಮಪಾನ ಮಾಡುವವರ ಹಾಗೂ ತಂಬಾಕು ಸೇವಿಸಿ ಉಗುಳುವವರ ವಿರುದ್ದ ಪ್ರಕರಣ ದಾಖಲಿಸಿ ದಂಡ ವಸೂಲಿ ಮಾಡಿದ ವರದಿಯನ್ನು ಜಿಲ್ಲಾ ತಂಬಾಕು ನಿಯಂತ್ರಣ ಘಟಕಕ್ಕೆ ನೀಡಬೇಕು. ಬೀಡಿ, ಸಿಗರೇಟ್ ತುಂಡುಗಳು ಹಾಗೂ ಇತರೆ ಪ್ಲಾಸ್ಟಿಕ್‌ಗಳನ್ನು ಬಿಸಾಡುವುದರಿಂದ ಪರಿಸರದ ಮೇಲೆ ಉಂಟಾಗುವ ದುಷ್ಪರಿಣಾಮಗಳ ಬಗ್ಗೆ ಮಾಲಿನ್ಯ ನಿಯಂತ್ರಣ ಮಂಡಳಿ ವತಿಯಿಂದ ಅರಿವು ಮೂಡಿಸಬೇಕು ಎಂದು ತಿಳಿಸಿದರು.
ಜಿಲ್ಲೆಯಲ್ಲಿರುವ ನೊಂದಾಯಿತ ಖಾಸಗಿ ಕ್ಲಿನಿಕ್, ನರ್ಸಿಂಗ್ ಹೋಂ, ಆಸ್ಪತ್ರೆ, ಡಯಾಲಿಸಿಸ್ ಕೇಂದ್ರಗಳಲ್ಲಿ ಕಡ್ಡಾಯವಾಗಿ ಧೂಮಪಾನ ನಿಷೇಧದ ನಾಮಫಲಕವನ್ನು ಮುಖ್ಯ ಪ್ರವೇಶ ದ್ವಾರ ಹಾಗೂ ಪ್ರಮುಖ ಸ್ಥಳಗಳಲ್ಲಿ ಪ್ರದರ್ಶಿಸಲು ಕೆ.ಪಿ.ಎಂ.ಇ ಕಾಯ್ದೆ ಅನುಷ್ಠಾನ ಅಧಿಕಾರಿಗಳು ಕ್ರಮ ವಹಿಸಬೇಕು. ಅಬಕಾರಿ, ಪೊಲೀಸ್ ಇಲಾಖೆ ಅಧಿಕಾರಿಗಳು ಧೂಮಪಾನ ಮಾಡುವವರ ವಿರುದ್ದ ಕೋಟ್ಪಾ ಕಾಯ್ದೆಯಡಿ ಪ್ರಕರಣಗಳನ್ನು ದಾಖಲಿಸಬೇಕು ಎಂದು ಜಿಲ್ಲಾಧಿಕಾರಿಯವರು ತಿಳಿಸಿದರು.
ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಒಳಪಡುವ ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಉತ್ಪನ್ನಗಳ ಸೇವನೆ ಮಾಡಿ ಬಿಸಾಡಿರುವ ತ್ಯಾಜ್ಯ ಪೊಟ್ಟಣಗಳನ್ನು ಅಂಗಡಿಯವರ ಮೂಲಕ ಸಂಗ್ರಹಿಸಿ ಸೂಕ್ತ ರೀತಿಯಲ್ಲಿ ವಿಲೇವಾರಿ ಮಾಡಬೇಕು. ಇದೇ ಮೇ ೩೧ ರಂದು ತಂಬಾಕು ರಹಿತ ದಿನವನ್ನು ಆಚರಿಸಲಿದ್ದು ವಿಶ್ವ ಆರೋಗ್ಯ ಸಂಸ್ಥೆ ಹೊರಡಿಸಿರುವ ಘೋಷವಾಕ್ಯದಂತೆ ತಂಬಾಕು ಪರಿಸರಕ್ಕೆ ಮಾರಕ ಎಂಬ ಬಗ್ಗೆ ವಿವಿಧ ಕಾರ್ಯ ಚಟುವಟಿಕೆಗಳನ್ನು ಹಮ್ಮಿಕೊಂಡು ಹೆಚ್ಚಿನ ಜಾಗೃತಿ ಮೂಡಿಸಬೇಕೆಂದು ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರು ತಿಳಿಸಿದರು.
ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಕಾನೂನು ಸೇವೆ ಪ್ರಾಧಿಕಾರದ ಕಾರ್ಯದರ್ಶಿಯವರಾದ ಎಂ. ಶ್ರೀಧರ, ಹೆಚ್ಚುವರಿ ಜಿಲ್ಲಾಧಿಕಾರಿ ಎಸ್. ಕಾತ್ಯಾಯಿನಿದೇವಿ, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಗೂಡೂರು ಭೀಮಸೇನ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಕೆ.ಎಂ. ವಿಶ್ವೇಶ್ವರಯ್ಯ, ಜಿಲ್ಲಾ ತಂಬಾಕು ನಿಯಂತ್ರಣ ಘಟಕದ ಅಧಿಕಾರಿ ಹಾಗೂ ಜಿಲ್ಲಾ ಸರ್ವಲೆನ್ಸ್ ಅಧಿಕಾರಿ ಡಾ. ನಾಗರಾಜು, ಮಹಿಳಾ ಮತ್ತು ಮಕ್ಕಳ ಕಲ್ಯಾಣಾಧಿಕಾರಿ ಗೀತಾಲಕ್ಷ್ಮಿ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರಾದ ನಂದಾ ಹಣಬರಟ್ಟಿ, ನಗರಾಭಿವೃದ್ದಿ ಕೋಶದ ಯೋಜನಾ ನಿರ್ದೇಶಕರಾದ ಕೆ. ಸುರೇಶ್, ಆಹಾರ ಇಲಾಖೆಯ ಉಪನಿರ್ದೆಶಕರಾದ ಯೋಗಾನಂದ, ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕರಾದ ರಾಘವೇಂದ್ರ, ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.
