ಜಿಲ್ಲೆಯಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆ ಕಡಿಮೆ ಇದ್ದರೂ ಮೈಮರೆಯುವಂತಿಲ್ಲ. ಸೋಂಕು ಹೆಚ್ಚಾಗದಂತೆ ತಡೆಯಲು ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು. ಗಡಿಭಾಗದಲ್ಲಿ ತಪಾಸಣೆ ಬಿಗಿಗೊಳಿಸಬೇಕು ಎಂದು ಸಹಕಾರ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಹೇಳಿದರು.

ಕೋವಿಡ್-19 ಸಂಬಂಧ ಜಿಲ್ಲೆಯಲ್ಲಿ ಕೈಗೊಂಡಿರುವ ಕ್ರಮಗಳ ಕುರಿತು ಜಿಲ್ಲಾ ಪಂಚಾಯತ್ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಸಚಿವರು, ಕೋವಿಡ್ ನಿಯಂತ್ರಣದ ವಿಚಾರದಲ್ಲಿ ಜಿಲ್ಲಾಧಿಕಾರಿ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಕೋವಿಡ್ ತಡೆಗೆ ಸರ್ಕಾರದಿಂದ ಅಗತ್ಯವಿರುವ ಎಲ್ಲಾ ರೀತಿಯ ಸೌಲಭ್ಯ ಕಲ್ಪಿಸಲಾಗುವುದು ಎಂದರು.

ಕೋವಿಡ್ ನಿಯಂತ್ರಣದಲ್ಲಿದ್ದರೂ ಎಲ್ಲಾ ರೀತಿಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು. ಶಾಲೆಗಳಿಗೆ ರಜೆ ನೀಡುವ ಬಗ್ಗೆ ಪೋಷಕರು ಕೇಳುತ್ತಿದ್ದಾರೆ. ಈ ಬಗ್ಗೆ ಜಿಲ್ಲಾಧಿಕಾರಿಗಳು ವಸ್ತುಸ್ಥಿತಿ ಅವಲೋಕಿಸಿ ಕ್ರಮಕೈಗೊಳ್ಳಲಿದ್ದಾರೆ. ಆಸ್ಪತ್ರೆಗಳಲ್ಲಿ ಬೆಡ್, ಆಕ್ಸಿಜನ್ ಕೊರತೆಯಾಗದಂತೆ ಕ್ರಮವಹಿಸಬೇಕೆಂದು ಹೇಳಿದರು.

ಜಿಲ್ಲೆಯಲ್ಲಿ 60 ಮತ್ತು 100 ಬೆಡ್ ಗಳ ಸಾಮರ್ಥ್ಯದ ಎರಡು ಕೋವಿಡ್ ಕೇರ್ ಸೆಂಟರ್ ತೆರೆಯಲಾಗಿದೆ. ಜಿಲ್ಲೆಯಲ್ಲಿ ಆಕ್ಸಿಜನ್ ಕೊರತೆಯಿಲ್ಲ. 26 ಕೆಎಲ್ ಆಕ್ಸಿಜನ್ ಲಭ್ಯವಿದೆ. ಇದರ ಜೊತೆಗೆ ಜೊಂಬೋ ಸಿಲಿಂಡರ್ ಕೂಡ ಲಭ್ಯವಿದೆ. ಮುಂದಿನ ತಿಂಗಳು ಪರೀಕ್ಷೆಗಳು ಇರುವುದರಿಂದ ಶಾಲೆಗಳಿಗೆ ರಜೆ ನೀಡುವ ವಿಚಾರದಲ್ಲಿ ಮಕ್ಕಳ ಶಿಕ್ಷಣದ ಮೇಲೆ ವ್ಯತಿರಿಕ್ತ ಪರಿಣಾಮ ಬೀರದ ರೀತಿಯಲ್ಲಿ ಕ್ರಮಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಚಾರುಲತಾ ಅವರು ಸಚಿವರ ಗಮನಕ್ಕೆ ತಂದರು.

ಜಿಲ್ಲೆಯಲ್ಲಿ 99.6% ರಷ್ಟು ಮೊದಲ ಡೋಸ್ ಲಸಿಕೆ ನೀಡಲಾಗಿದ್ದರೆ 83%ನಷ್ಟು ಎರಡನೇ ಡೋಸ್ ಲಸಿಕೆ ನೀಡಲಾಗಿದೆ. 15 ರಿಂದ 17 ವಯೋಮಾನದ ಮಕ್ಕಳಲ್ಲಿ 64% ಮಕ್ಕಳಿಗೆ ಮೊದಲ ಡೋಸ್ ನೀಡಲಾಗಿದೆ. 792 ಜೊಂಬೋ ಸಿಲಿಂಡರ್, 297 ಬಿ ಮಾದರಿಯ ಸಿಲಿಂಡರ್ ಹಾಗೂ 26 ಕೆಎಲ್ ಎಲ್ ಎಂಒ ಆಕ್ಸಿಜನ್ ಲಭ್ಯವಿದೆ. 76 ಕ್ಲಸ್ಟರ್ ಕಂಟೋನ್ಮೆಂಟ್ ಜೋನ್ ಗಳನ್ನಾಗಿ ಮಾಡಲಾಗಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಮಾಹಿತಿ ನೀಡಿದರು.

ಸಭೆಯಲ್ಲಿ ಶಾಸಕರುಗಳಾದ ಪುಟ್ಟರಂಗಶೆಟ್ಟಿ, ನಿರಂಜನ್ ಕುಮಾರ್, ನರೇಂದ್ರ, ವಿಧಾನಪರಿಷತ್ ಸದಸ್ಯರಾದ ಸಿ.ಎನ್.ಮಂಜೇಗೌಡ, ಜಿಲ್ಲಾಧಿಕಾರಿ ಚಾರುಲತಾ, ಜಿಪಂ ಸಿಇಒ ಗಾಯಿತ್ರಿ ಸೇರಿದಂತೆ ಹಲವು ಅಧಿಕಾರಿಗಳು ಉಪಸ್ಥಿತರಿದ್ದರು.