ಬೆಂಗಳೂರು: ಕೊರೋನಾ ಮಹಾಮಾರಿ ಹೆಚ್ಚುತ್ತಿರುವ ಬೆನ್ನಲ್ಲೇ ಕಲರ್ಸ್ ಕನ್ನಡ ಚಾನೆಲ್ ನಲ್ಲಿ ಪ್ರಸಾರವಾಗುತ್ತಿರುವ ಕನ್ನಡದ ಖ್ಯಾತ ಬಿಗ್ ಬಾಸ್ ನ ಎಂಟನೇ ಸೀಸನ್ ಫೈನಲ್ ತಲುಪುವ ಮುನ್ನವೇ ಅಂತ್ಯಗೊಳ್ಳಲಿದೆ ಎಂದು ಹೇಳಲಾಗುತ್ತಿದೆ.
ಚಾನಲ್ ನ ಬ್ಯಸಿನೆಸ್ ಹೆಡ್ ಪರಮೇಶ್ವರ್ ಗುಂಡ್ಕಲ್ ಅವರು ತಮ್ಮ ಫೇಸ್‌ಬುಕ್‌ನಲ್ಲಿ ಈ ವಿಷಯ ಹಂಚಿಕೊಂಡಿರುವ ವಿಷಯವು ಇದನ್ನು ಖಚಿತಪಡಿಸಿದ್ದು, ಬಹುಶಃ ಭಾನುವಾರವೇ ಶೋ ಅಂತ್ಯಗೊಳ್ಳಲಿದೆ.
ಅವರು ಫೇಸ್ ಬುಕ್ ನಲ್ಲಿ ಬರೆದ ಬರಹ ಹೀಗಿದೆ. ಅದೇನೆಂದರೆ ಬಿಗ್ ಬಾಸ್ ಶುರುವಾಗಿ ಇವತ್ತಿಗೆ ಎಪ್ಪತ್ತೊಂದನೇ ದಿನ. ಪಿಸಿಆರ್ ನಲ್ಲಿ ನಿಂತು ಈ ಮನೇಲಿರೋ ಹನ್ನೊಂದು ಜನ ಓಡಾಡುತ್ತಿರುವುದನ್ನು ನೋಡಿದಾಗ ಒಂದಕ್ಕಿಂತ ಹೆಚ್ಚು ಭಾವನೆಗಳು ಒಂದೇ ಸಲಕ್ಕೆ ಬಂದು ಮನಸ್ಸಿಗೆ ವಿಚಿತ್ರವಾದ ತಳಮಳ. ಹೊರಗಡೆ ಎದುರಾಗಿರುವ ಕಷ್ಟದ ಸವಾಲು ಗೊತ್ತಿಲ್ಲದೇ ಒಳಗಡೆ ಇರುವವರೆಲ್ಲಾ ಖುಷಿಯಾಗಿದ್ದಾರೆ. ಐಸೋಲೇಷನ್ನಿನಲ್ಲಿ ಇರುವುದರಿಂದ ಸುರಕ್ಷಿತವಾಗಿಯೂ ಇದ್ದಾರೆ. ಎಲ್ಲರಿಗೂ ಹೊರಗಡೆ ಆಗಿರುವ ಬೆಳವಣಿಗೆ ತಿಳಿಸಿ ನಾಳೆ(ಭಾನುವಾರ) ಹೊರಗಡೆ ಕರೆಯುತ್ತಿದ್ದೇವೆ. ಅನಂತರ ಅವರನ್ನು ಮತ್ತು ತಂಡವನ್ನು ಸುರಕ್ಷಿತವಾಗಿ ಮನೆಗೆ ಕಳುಹಿಸಲು ವ್ಯವಸ್ಥೆ ಆಗುತ್ತಿದೆ. ನೂರಾರು ದಿನಗಳ ಕೆಲಸ. ನೂರಾರು ಜನರ ಕೆಲಸ. ಎಲ್ಲವನ್ನೂ ಪಕ್ಕಕ್ಕಿಟ್ಟು ಶ್ರದ್ಧೆಯಿಂದ ಕೆಲಸ ಮಾಡಿದ ಒಂದು ತಂಡದ ಕನಸು ಅರ್ಧಕ್ಕೇ ನಿಂತಿದೆ. ಕಷ್ಟದ ತೀರ್ಮಾನವಾದರೂ ಸಮಾಧಾನ ಕೊಟ್ಟ ತೀರ್ಮಾನ. ಮನಸ್ಸು ಭಾರವಾಗಿದೆ. ಈ ಶೋ ನಿಲ್ಲುತ್ತಿದೆ ಅಂತಲ್ಲ. ಹೊರಗಡೆ ಗಾಳಿಯಲ್ಲಿ ಓಡಾಡುತ್ತಿರುವ ಕಣ್ಣಿಗೆ ಕಾಣದ ಅನಿಶ್ಚಿತತೆಯಿಂದ ಇನ್ನಿಲ್ಲದ ಕಳವಳ. ಎಲ್ಲರಿಗೂ ಈ ಕಳವಳಕ್ಕೊಂದು ಉತ್ತರ ಬೇಗ ಸಿಗಲಿ. ಸುರಕ್ಷಿತವಾಗಿರಿ.
ಬಹುಶಃ ಈ ಬರಹ ಭಾವನೆಗಳಿಂದ ಕೂಡಿದೆ. ಜನಪ್ರಿಯ ಶೋವನ್ನು ಅಂತಿಮವಾಗುವ ಮುನ್ನವೇ ಅಂತಿಮವಾಗಿಸಬೇಕಾಗಿದೆ ಎಂಬುದು ಬೇಸರದ ಸಂಗತಿ ಆದರೆ ಒಳಗಿರುವ ಬಿಗ್ ಬಾಸ್ ಸ್ಪರ್ಧಿಗಳು ಹೇಗೆ ಇದನ್ನು ಅರಗಿಸಿಕೊಳ್ಳುತ್ತಾರೆ ಎಂಬುದನ್ನು ಕಾದು ನೋಡಬೇಕಾಗಿದೆ.