ಚಾಮರಾಜನಗರ: ಕ್ರೀಡಾಪಟುಗಳು ವಿವಿಧ ಕ್ರೀಡೆಯಲ್ಲಿ ಉತ್ತಮ ಸಾಧನೆ ಮಾಡಿ ಗೆಲುವಿನ ಮೂಲಕ ಜಿಲ್ಲೆಗೆ ಕೀರ್ತಿ ತರಬೇಕು ಎಂದು ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಅವರು ಸಲಹೆ ಮಾಡಿದರು.
ನಗರದ ಡಾ. ಬಿ.ಆರ್. ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಏರ್ಪಡಿಸಿದ್ದ ೨೦೨೨-೨೩ನೇ ಸಾಲಿನ ತಾಲೂಕು ಮಟ್ಟದ ದಸರಾ ಕ್ರೀಡಾಕೂಟಕ್ಕೆ ಗುಂಡು ಎಸೆಯುವ ಮೂಲಕ ಚಾಲನೆ ನೀಡಿ ಅವರು ಮಾತನಾಡಿದರು.
ಕ್ರೀಡಾಪಟುಗಳು ತಾಲೂಕು ಮಟ್ಟದಲ್ಲಿ ಜಯಿಸಿ ಮುಂದೆ ನಡೆಯುವ ಜಿಲ್ಲಾ ಹಾಗೂ ರಾಜ್ಯ ಮಟ್ಟದಲ್ಲಿ ಗೆದ್ದು ಜಿಲ್ಲೆಗೆ ಕೀರ್ತಿ ತರಬೇಕು. ಕಳೆದ ಎರಡು ವರ್ಷದಿಂದ ಕೋವಿಡ್ ನಿಂದಾಗಿ ದಸರಾವನ್ನು ವಿಜೃಂಭಣೆಯಿಂದ ಆಚರಿಸಲು ಸಾಧ್ಯವಾಗಿರಲಿಲ್ಲ. ಆದರೆ ಈ ಬಾರಿ ಜಿಲ್ಲೆಯಲ್ಲಿ ದಸರವನ್ನು ಅದ್ದೂರಿಯಿಂದ ಆಚರಿಸುವಂತಾಗಬೇಕು ಎಂದರು.
ಆಟಗಾರರು ಕ್ರೀಡಾ ಸ್ಪೂರ್ತಿಯಿಂದ ಪಾಲ್ಗೊಳ್ಳಬೇಕು. ಕ್ರೀಡಾ ಮನೋಭಾವನೆ ಬೆಳೆಸಿಕೊಳ್ಳಿ ಎಂದು ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಅವರು ತಿಳಿಸಿದರು.
ನಗರಸಭೆ ಅಧ್ಯಕ್ಷರಾದ ಆಶಾ ನಟರಾಜು ಅವರು ಮಾತನಾಡಿ ಕ್ರೀಡೆ ದೈಹಿಕ ಹಾಗೂ ಮಾನಸಿಕ ವೃದ್ಧಿಗೆ ಸಹಾಯಕಾರಿಯಾಗಿದೆ. ಸೋಲು ಗೆಲುವು ಎರಡನ್ನೂ ಸಮಾನವಾಗಿ ಸ್ವೀಕಾರ ಮಾಡಬೇಕು. ಸೋತವರಿಗೆ ಇದೇ ಕೊನೆಯ ಪಂದ್ಯವಾಗಿರುವುದಿಲ್ಲ. ಮುಂದಿನ ದಿನಗಳಲ್ಲಿ ಅವಕಾಶವನ್ನು ರೂಪಿಸಿಕೊಳ್ಳಬಹುದು ಎಂದರು.
ನಗರಸಭೆ ಉಪಾಧ್ಯಕ್ಷರಾದ ಪಿ. ಸುಧಾ, ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರಾದ ಆರ್. ಅನಿತಾ ಇನ್ನಿತರರು ಉಪಸ್ಥಿತರಿದ್ದರು.
