ವರದಿ:ಮಹೇಶ್
ಮೈಸೂರು, ಜೂ.29:ಮೈಸೂರು ನಗರದಿಂದ ಸುಮಾರು 8 ಕಿ.ಮೀ. ದೂರದಲ್ಲಿರುವ ಮೈಸೂರು ತಾಲ್ಲೂಕಿನ ರಮ್ಮನಹಳ್ಳಿ ಗ್ರಾಮಕ್ಕೆ ಅಗತ್ಯ ಮೂಲಸೌಕರ್ಯಗಳನ್ನು ಕಲ್ಪಿಸುವಂತೆ ಗ್ರಾಮಸ್ಥರು ಕರ್ನಾಟಕ ಸರ್ಕಾರದ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಮನವಿ ಸಲ್ಲಿಸಿದರು.ಸುಮಾರು 20 ಸಾವಿರಕ್ಕೂ ಅಧಿಕ ಜನಸಂಖ್ಯೆ ಹೊಂದಿರುವ ರಮ್ಮನಹಳ್ಳಿ ಮೈಸೂರು ತಾಲ್ಲೂಕಿನ ಎರಡನೇ ಅತಿದೊಡ್ಡ ಗ್ರಾಮವಾಗಿದ್ದರೂ, ಶಿಕ್ಷಣ, ಆರೋಗ್ಯ ಮತ್ತು ಸಾರಿಗೆ ಸೇರಿದಂತೆ ಹಲವು ಮೂಲಭೂತ ಸೌಲಭ್ಯಗಳಿಂದ ವಂಚಿತವಾಗಿದೆ ಎಂದು ಗ್ರಾಮಸ್ಥರು ಮನವಿಯಲ್ಲಿ ತಿಳಿಸಿದ್ದಾರೆ.ಗ್ರಾಮದಲ್ಲಿರುವ ಸರ್ಕಾರಿ ಶಾಲೆಯಲ್ಲಿ 1ರಿಂದ 8ನೇ ತರಗತಿಯವರೆಗೆ ಮಾತ್ರ ಶಿಕ್ಷಣ ಲಭ್ಯವಿದ್ದು, 9 ಮತ್ತು 10ನೇ ತರಗತಿಗಳು ಇಲ್ಲದ ಕಾರಣ ಅನೇಕ ವಿದ್ಯಾರ್ಥಿಗಳು ವಿದ್ಯಾಭ್ಯಾಸವನ್ನು ಅರ್ಧದಲ್ಲೇ ನಿಲ್ಲಿಸುವ ಪರಿಸ್ಥಿತಿ ನಿರ್ಮಾಣವಾಗಿದೆ. ಶಾಲಾ ಕಟ್ಟಡವೂ ದುರಸ್ತಿಯ ಅಗತ್ಯವಿದ್ದು, ಸರ್ಕಾರಿ ಪ್ರೌಢಶಾಲೆ ಹಾಗೂ ಪಿಯು ಕಾಲೇಜು ಸ್ಥಾಪಿಸುವಂತೆ ಮನವಿ ಮಾಡಿದ್ದಾರೆ.
ಗ್ರಾಮದಲ್ಲಿ ಸರ್ಕಾರಿ ಆಸ್ಪತ್ರೆ ಇಲ್ಲದ ಕಾರಣ ಸಾರ್ವಜನಿಕರು ಚಿಕಿತ್ಸೆಗಾಗಿ ಮೈಸೂರಿಗೆ ತೆರಳಬೇಕಾಗಿದೆ. ಆದ್ದರಿಂದ ಸುಸಜ್ಜಿತ ಸರ್ಕಾರಿ ಆಸ್ಪತ್ರೆ ಹಾಗೂ ಹೆರಿಗೆ ಆಸ್ಪತ್ರೆ ನಿರ್ಮಿಸಬೇಕೆಂದು ಒತ್ತಾಯಿಸಿದ್ದಾರೆ.ಇದಲ್ಲದೆ, ಸುಮಾರು ೨೦ ಸಾವಿರ ಜನಸಂಖ್ಯೆ ಇದ್ದರೂ ಗ್ರಾಮದಲ್ಲಿ ಬಸ್ ನಿಲ್ದಾಣದ ವ್ಯವಸ್ಥೆ ಇಲ್ಲ. ವಿದ್ಯಾರ್ಥಿಗಳು, ಮಹಿಳೆಯರು ಹಾಗೂ ಸಾರ್ವಜನಿಕರು ಮಳೆ-ಬಿಸಿಲಿನಲ್ಲೇ ಬಸ್‌ಗಾಗಿ ಕಾಯುವ ಪರಿಸ್ಥಿತಿ ಇರುವುದರಿಂದ ಸುಸಜ್ಜಿತ ಬಸ್ ನಿಲ್ದಾಣ ನಿರ್ಮಿಸಿ ಅಗತ್ಯ ಸಾರಿಗೆ ಸೌಲಭ್ಯ ಕಲ್ಪಿಸಬೇಕೆಂದು ಆಗ್ರಹಿಸಿದ್ದಾರೆ.ನೂತನವಾಗಿ ಲೋಕೋಪಯೋಗಿ ಸಚಿವರಾಗಿ ಅಧಿಕಾರ ವಹಿಸಿಕೊಂಡಿರುವ ಸತೀಶ್ ಜಾರಕಿಹೊಳಿ ಅವರಿಗೆ ಅಭಿನಂದನೆ ಸಲ್ಲಿಸಿರುವ ಗ್ರಾಮಸ್ಥರು, ತಮ್ಮ ಅವಧಿಯಲ್ಲಿ ರಮ್ಮನಹಳ್ಳಿ ಗ್ರಾಮದ ಸಮಗ್ರ ಅಭಿವೃದ್ಧಿಗೆ ವಿಶೇಷ ಆದ್ಯತೆ ನೀಡಿ ಮೂಲಸೌಕರ್ಯಗಳನ್ನು ಶೀಘ್ರವಾಗಿ ಕಲ್ಪಿಸುವಂತೆ ಮನವಿ ಮಾಡಿದ್ದಾರೆ. ಚಿತ್ರದಲ್ಲಿ ಮಹದೇವ ಮದಕರಿ, ಲೋಕೇಶ್ ಪಿಯಾ, ಹಾಗೂ ಜಗದೀಶ್, ಮಂಜು,ಪುಟ್ಟಬುದ್ದಿ,ಶೇಖರ್,ರಂಗಸ್ವಾಮಿ ನಾಯಕ ಮನವಿ ನೀಡಿದರು.
