ಚಾಮರಾಜನಗರ: ಯಾವುದೇ ಆಮಿಷ, ಪ್ರಭಾವಕ್ಕೆ ಒಳಗಾಗದೆ ಮತದಾನ ಮಾಡುವ ಮೂಲಕ ಯೋಗ್ಯರನ್ನು ಆಯ್ಕೆ ಮಾಡಬೇಕೆಂದು ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಾದ ಬಿ.ಎಸ್. ಭಾರತಿ ಅವರು ತಿಳಿಸಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಚುನಾವಣಾ ಆಯೋಗ ಮತ್ತು ಜಿಲ್ಲಾಡಳಿತದ ವತಿಯಿಂದ ಆಯೋಜಿಸಲಾಗಿದ್ದ ೧೨ನೇ ರಾಷ್ಟ್ರೀಯ ಮತದಾರರ ದಿನ ಆಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಚುನಾವಣೆಯಲ್ಲಿ ನಿರ್ಭೀತಿಯಿಂದ ಧರ್ಮ, ಜನಾಂಗ, ಜಾತಿ, ಮತ, ಭಾಷೆ ಅಥವಾ ಯಾವುದೇ ಪ್ರೇರೇಪಣೆಗಳ ದಾಕ್ಷಿಣ್ಯಗಳಿಂದ ಪ್ರಭಾವಿತರಾಗದೇ ಮತ ಚಲಾಯಿಸುತ್ತೇವೆಂದು ಮತದಾರರ ದಿನವಾದ ಇಂದು ಪ್ರತಿಜ್ಞಾ ವಿಧಿ ಸ್ವೀಕರಿಸಲಾಗಿದೆ. ಇದರ ಮಹತ್ವವನ್ನು ಎಲ್ಲ ಜನರಿಗೂ ತಲುಪಿಸಬೇಕೆಂದು ಜಿಲ್ಲಾ ನ್ಯಾಯಾಧೀಶರು ಸಲಹೆ ಮಾಡಿದರು.
ಮತದಾನದ ಪ್ರಾಮುಖ್ಯತೆ ಎಲ್ಲರಿಗೂ ತಿಳಿಯಬೇಕು. ಈ ನಿಟ್ಟಿನಲ್ಲಿ ರಾಷ್ಟ್ರೀಯ ಮತದಾರರ ದಿನದ ಮೂಲಕ ಜಾಗೃತಿ ಮೂಡಿಸಲಾಗುತ್ತಿದೆ. ವಿಶೇಷವಾಗಿ ಯುವ ಮತದಾರರನ್ನು ಉತ್ತೇಜಿಸುವ ಸದುದ್ದೇಶ ಹೊಂದಲಾಗಿದೆ. ಮತದಾನ ಪ್ರಕ್ರಿಯೆಯಲ್ಲಿ ಎಲ್ಲರು ಪಾಲ್ಗೊಳ್ಳಬೇಕು ಎಂದು ಜಿಲ್ಲಾ ನ್ಯಾಯಾಧೀಶರು ತಿಳಿಸಿದರು.
ಗುಂಡ್ಲುಪೇಟೆ ಸರ್ಕಾರಿ ಕಾಲೇಜಿನ ಸಹಾಯಕ ಪ್ರಾಧ್ಯಪಕರಾದ ಗಣೇಶ್ ಅವರು ಉಪನ್ಯಾಸ ನೀಡಿ ಪ್ರಜಾ ಪ್ರಭುತ್ವದ ಘನತೆ ಎತ್ತಿಹಿಡಿಯುವಲ್ಲಿ ಮತದಾನವು ಪ್ರಮುಖ ಪಾತ್ರ ವಹಿಸಲಿದೆ. ಪ್ರಜಾ ತಂತ್ರವನ್ನು ಬಲಪಡಿಸಲು ಮತದಾನ ಮಾಡಬೇಕು. ಮತ ಚಲಾವಣೆಯಿಂದ ಯಾರೂ ಸಹ ವಿಮುಕ್ತರಾಗಬಾರದು ಎಂದರು.
ಬದಲಾವಣೆ ಎಂಬುದು ಒಬ್ಬರಿಂದ ಸಾಧ್ಯವಿಲ್ಲ. ಪ್ರಬುದ್ದ ಮತದಾರರಿಂದ ಭವ್ಯ ರಾಷ್ಟ್ರ ನಿರ್ಮಾಣ ಸಾಧ್ಯವಾಗಲಿದೆ. ಈ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಜಾಗೃತರಾಗಬೇಕು. ಸಮಾಜದ ಒಳಿತು ಬಯಸುವವರನ್ನು ಆಯ್ಕೆ ಮಾಡಬೇಕು. ಬೇರೆಯವರು ಮತದಾನ ಮಾಡಲು ಉತ್ತೇಜಿಸಬೇಕು ಎಂದು ಗಣೇಶ್ ಅವರು ತಿಳಿಸಿದರು.
ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರು ಅಧ್ಯಕ್ಷತೆ ವಹಿಸಿದ್ದರು. ಹೆಚ್ಚುವರಿ ಜಿಲ್ಲಾಧಿಕಾರಿ ಎಸ್. ಕಾತ್ಯಾಯಿನಿದೇವಿ ಅವರು ಮತದಾರರ ಪ್ರತಿಜ್ಞಾ ವಿಧಿ ಬೋಧಿಸಿದರು. ೧೮ ವರ್ಷ ತುಂಬಿದ ಯುವ ಮತದಾರರಿಗೆ ಗುರುತಿನ ಚೀಟಿ ವಿತರಿಸಲಾಯಿತು.
ಇದೇ ವೇಳೆ ರಾಜ್ಯ ಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದಿರುವ ಚಾಮರಾಜನಗರದ ಆದರ್ಶ ವಿದ್ಯಾಲಯದ ಎಸ್. ವರ್ಷಿತಾ ಹಾಗೂ ಭಿತ್ತಿ ಚಿತ್ರ (ಪೋಸ್ಟರ್ ಮೇಕಿಂಗ್) ಸ್ಪರ್ಧೆಯಲ್ಲಿ ತೃತೀಯ ಸ್ಥಾನ ಪಡೆದಿರುವ ಗುಂಡ್ಲುಪೇಟೆಯ ದೊಡ್ಡುಂಡಿ ಭೋಗಪ್ಪ ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಬಿ.ಎಂ. ಮುರಳಿ ಅವರಿಗೆ ಬಹುಮಾನ ಹಾಗೂ ಪ್ರಶಸ್ತಿ ಪತ್ರ ನೀಡಿ ಗೌರವಿಸಲಾಯಿತು.
ಜಿಲ್ಲಾ ಸ್ವೀಪ್ ಸಮಿತಿಯಿಂದ ಸಾಕ್ಷರತಾ ಕ್ಲಬ್ ಚಟುವಟಿಕೆಗಳಲ್ಲಿ ಉತ್ತಮ ಕಾರ್ಯ ಸಾಧನೆ ಮಾಡಿದ ಉಪನ್ಯಾಸಕರು, ಶಿಕ್ಷಕರಿಗೆ ಬಹುಮಾನ ಮತ್ತು ಪ್ರಶಸ್ತಿ ಪತ್ರ ನೀಡಲಾಯಿತು. ಉತ್ತಮವಾಗಿ ಕರ್ತವ್ಯ ನಿರ್ವಹಿಸಿದ ಮತಗಟ್ಟೆ ಮಟ್ಟದ ಅಧಿಕಾರಿಗಳಿಗೆ ಪ್ರಶಂಸನಾ ಪತ್ರ ವಿತರಿಸಲಾಯಿತು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಯವರಾದ ಎಂ. ಶ್ರೀಧರ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಕೆ.ಎಂ. ಗಾಯತ್ರಿ, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರಾದ ಉಮ್ಮತ್ತೂರು ಇಂದುಶೇಖರ್, ಚುನಾವಣಾ ತಹಶೀಲ್ದಾರ್ ವಿನೋದ ಇತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
