ಚಾಮರಾಜನಗರ: ಗ್ರಾಮೀಣ ಪ್ರದೇಶದ ಜನರ ನೀರಿನ ಬವಣೆಗೆ ಶಾಶ್ವತ ಪರಿಹಾರ ಕಲ್ಪಿಸುವ ಕೇಂದ್ರ ಸರ್ಕಾರದ ಮಹಾತ್ವಕಾಂಕ್ಷಿ ಯೋಜನೆಯಾದ ಜಲಜೀವನ್ ಮಿಷನ್ ಯೋಜನೆಯಡಿ ಜಿಲ್ಲೆಯಲ್ಲಿ ಕೈಗೆತ್ತಿಕೊಂಡಿರುವ ಕಾಮಗಾರಿಯನ್ನು ನಿಗದಿತ ಅವಧಿಯೊಳಗೆ ಪೂರ್ಣಗೊಳಿಸಬೇಕು. ಕಾಮಗಾರಿ ವಿಳಂಬ ಹಾಗೂ ಪೂರ್ಣಗೊಳಿಸದೇ ಇದ್ದಲ್ಲಿ ಗುತ್ತಿಗೆದಾರರನ್ನು ಕಪ್ಪು ಪಟ್ಟಿಗೆ ಸೇರಿಸಲು ಕ್ರಮ ತೆಗೆದುಕೊಳ್ಳಬೇಕೆಂದು ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಸಚಿವರಾದ ಕೆ.ಎಸ್. ಈಶ್ವರಪ್ಪ ಅವರು ಅಧಿಕಾರಿಗಳಿಗೆ ತಾಕೀತು ಮಾಡಿದರು. 

ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿಂದು ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. 

ಗ್ರಾಮೀಣ ಪ್ರದೇಶದ ಪ್ರತೀ ಮನೆಗಳಿಗೂ ಜಲ ಜೀವನ್ ಮಿಷನ್ ಯೋಜನೆಯಡಿ ನಳ ಸಂಪರ್ಕ ಕಲ್ಪಿಸುವ ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತಿದೆ. ಕೆಲ ತಾಲೂಕುಗಳಲ್ಲಿ ಕಾಮಗಾರಿ ಚುರುಕಾಗಬೇಕಿದೆ. ಈ ತಿಂಗಳು ಹಾಗೂ ಮುಂದಿನ ತಿಂಗಳಿನ ವೇಳೆಗೆ ಪೂರ್ಣಗೊಳಿಸಲು ನಿಗದಿಯಾಗಿರುವ ಕಾಮಗಾರಿಯನ್ನು ಯಾವುದೇ ಕಾರಣಕ್ಕೂ ವಿಳಂಬ ಮಾಡದೇ ಮುಗಿಸಬೇಕು ಎಂದು ಸಚಿವರು ಕಟ್ಟುನಿಟ್ಟಿನ ಸೂಚನೆ ನೀಡಿದರು. 

ಕಾಮಗಾರಿಗೆ ವೇಗ ನೀಡಲು ಹಾಗೂ ಏಕಕಾಲದಲ್ಲಿ ಎಲ್ಲೆಡೆ ಪ್ರಗತಿಯಾಗಲು ಹೆಚ್ಚು ಬ್ಯಾಚ್‌ಗಳಲ್ಲಿ ಕೆಲಸ ನಿರ್ವಹಿಸಬೇಕು. ಗುತ್ತಿಗೆದಾರರು, ಎಂಜಿನಿಯರ್‌ಗಳು ಹಾಗೂ ಅಧಿಕಾರಿಗಳ ಸಭೆಯನ್ನು ಕೂಡಲೇ ಕರೆದು ಕಾಮಗಾರಿ ಶೀಘ್ರಗತಿಯಲ್ಲಿ ಪೂರ್ಣವಾಗಲು ಗಡುವು ನೀಡಬೇಕು. ಪ್ರತೀ ವಾರವು ಇಂತಿಷ್ಟು ಕಾಮಗಾರಿಗಳನ್ನು ಕಾಲಮಿತಿಯಲ್ಲಿ ಮುಗಿಸಲೇಬೇಕೆಂಬ ನಿರ್ದೇಶನ ನೀಡಬೇಕು. ಕಾಮಗಾರಿ ಪ್ರಗತಿ ಪರಿಶೀಲಿಸಬೇಕು. ಕಾಮಗಾರಿ ನಿರ್ವಹಣೆಯಲ್ಲಿ ವಿಳಂಬ ಹಾಗೂ ಕಾಲಮಿತಿಯಲ್ಲಿ ಪೂರ್ಣಗೊಳಿಸದಿದ್ದಲ್ಲಿ ಗುತ್ತಿಗೆದಾರರನ್ನು ಕಪ್ಪು ಪಟ್ಟಿಗೆ ಸೇರಿಸಲು ಕ್ರಮ ತೆಗೆದುಕೊಳ್ಳಬೇಕೆಂದು ಸಚಿವರು ತಿಳಿಸಿದರು. 

ಜಲಜೀವನ್ ಮಿಷನ್ ಯೋಜನೆಗೆ ಹಣದ ಕೊರತೆಯಿಲ್ಲ. ೨೦೨೩ರೊಳಗೆ ಗ್ರಾಮದ ಜನವಸತಿ ಕುಟುಂಬಗಳಿಗೆ ನಲ್ಲಿ ಮೂಲಕ ಸಂಪರ್ಕ ಕಲ್ಪಿಸುವ ಯೋಜನೆ ಪೂರ್ಣವಾಗಬೇಕಿದೆ. ಪ್ರಸಕ್ತ ಸಾಲಿನಲ್ಲಿ ನಿಗದಿಪಡಿಸಿರುವ ಗುರಿಗೆ ಅನುಗುಣವಾಗಿ ಸಂಪರ್ಕ ಕಲ್ಪಿಸಿ ನೀರು ಪೂರೈಸಬೇಕು. ಟ್ರಯಲ್ ರನ್ ಗಳನ್ನು ಪೂರ್ಣಗೊಳಿಸಿ ನೀರು ಒದಗಿಸುವ ಕೆಲಸ ತ್ವರಿತವಾಗಿ ಆಗಬೇಕು ಎಂದು ಸಚಿವರು ಸೂಚನೆ ನೀಡಿದರು. 

ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಅವರು ಮಾತನಾಡಿ ಗ್ರಾಮಗಳಲ್ಲಿ ಕಾಮಗಾರಿ ಪೂರ್ಣವಾಗಬೇಕು. ಯೋಜನೆಯ ಪ್ರಯೋಜನ ಶೀಘ್ರ ತಲುಪಬೇಕು. ಎಲ್ಲಾ ಕಡೆ ಕಾಮಗಾರಿ ವೇಗವಾಗಿ ನಡೆಯಬೇಕು ಎಂದರು. 

ಶಾಸಕರಾದ ಎನ್. ಮಹೇಶ್ ಅವರು ಮಾತನಾಡಿ ಗ್ರಾಮೀಣ ಪ್ರದೇಶದ ಮನೆ ಮನೆಗೂ ಶುದ್ದ ಕುಡಿಯುವ ನೀರು ಪೂರೈಸುವ ಯೋಜನೆಯನ್ನು ಕಾಲಮಿತಿಯಲ್ಲಿ ಕಾಳಜಿವಹಿಸಿ ಕೆಲಸ ಮಾಡಬೇಕು. ಅಧಿಕಾರಿಗಳು ಯಾವುದೇ ಸಬೂಬು ಹೇಳದೆ ಕಾಮಗಾರಿ ಪೂರ್ಣಗೊಳಿಸಬೇಕು ಎಂದು ತಿಳಿಸಿದರು.

ಶಾಸಕರಾದ ಸಿ.ಎಸ್. ನಿರಂಜನ್ ಕುಮಾರ್ ಅವರು ಮಾತನಾಡಿ ಜಲಜೀವನ್ ಮಿಷನ್ ಯೋಜನೆಯಡಿ ಗುಣಮಟ್ಟದ ಕೆಲಸ ಆಗಬೇಕು. ನಿಗದಿತ ಆಳದಲ್ಲಿ ಪೈಪ್ ಲೈನ್ ಅಳವಡಿಕೆ ಕಾರ್ಯ ಆಗಬೇಕು. ನೀರು ಸಂಗ್ರಹಕ್ಕೆ ಹೆಚ್ಚುವರಿ ಟ್ಯಾಂಕ್ ಗಳನ್ನು ಸಿದ್ದಪಡಿಸಿಕೊಳ್ಳಬೇಕು. ಏಕಕಾಲದಲ್ಲಿ ಎಲ್ಲಾ ಸ್ಥಳಗಳಲ್ಲಿ ಕಾಮಗಾರಿ ಪ್ರಗತಿಯಾಗಬೇಕು ಎಂದರು. 

ಕೊಳ್ಳೇಗಾಲ ತಾಲೂಕಿನ ಹನೂರು ವಿಧಾನಸಭಾ ಕ್ಷೇತ್ರ ಹಾಗೂ ಕೊಳ್ಳೇಗಾಲ ಟಗರುಪುರ ಯಳಂದೂರು ತಾಲೂಕಿನ ವಿವಿಧ ಗ್ರಾಮಗಳಲ್ಲಿ ಶಾಶ್ವತ ಕುಡಿಯುವ ನೀರು ಸರಬರಾಜು ಮಾಡುವ ಬಹುಗ್ರಾಮ ಕುಡಿಯುವ ನೀರಿನ ಯೋಜನೆಯ ಪ್ರಗತಿ ಪರಿಶೀಲಿಸಿದ ಸಚಿವರು ಯಾವುದೇ ಸಮಸ್ಯೆಗಳಿದ್ದರೂ ಪರಿಹರಿಸಬೇಕು. ವಿಳಂಬ ಮಾಡದೇ ಕಾಮಗಾರಿಯನ್ನು ಪೂರ್ಣಗೊಳಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು. 

ಮಹಾತ್ಮಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯಡಿ ಯಾರೇ ಕೇಳಿದರೂ ಕೆಲಸ ನೀಡಬೇಕು. ಪ್ರಸಕ್ತ ಸಾಲಿನಲ್ಲಿ ಜಿಲ್ಲೆಗೆ ನಿಗದಿಪಡಿಸಿರುವ ಗುರಿ ಮೀರಿಯೂ ಅಗತ್ಯ ಕಾಮಗಾರಿಗಳನ್ನು ಬೇಡಿಕೆಗೆ ಅನುಸಾರವಾಗಿ ನಿರ್ವಹಿಸಬೇಕು. ಕಲ್ಯಾಣಿ, ಕೆರೆಗಳ ಅಭಿವೃದ್ದಿಗೆ ಹೆಚ್ಚು ಆದ್ಯತೆ ನೀಡಬೇಕು. ಮುಖ್ಯ ರಸ್ತೆಗಳಲ್ಲಿ ಬರುವ ಕೆರೆಗಳ ಅಭಿವೃದ್ದಿಗೂ ವಿಶೇಷ ಗಮನ ಹರಿಸಬೇಕು. ಸ್ವಚ್ಚ ಭಾರತ್ ಮಿಷನ್ ಗ್ರಾಮ ಯೋಜನೆಯಡಿ ಶೌಚಾಲಯಗಳು ಪೂರ್ಣವಾಗಬೇಕು. ತ್ಯಾಜ್ಯ ನಿರ್ವಹಣೆ ಸಂಬಂಧ ಪ್ರಕ್ರಿಯೆಗಳಿಗೆ ಹೆಚ್ಚಿನ ಮುತುವರ್ಜಿ ವಹಿಸಬೇಕು ಎಂದು ಸಚಿವರಾದ ಕೆ.ಎಸ್. ಈಶ್ವರಪ್ಪ ಅವರು ತಿಳಿಸಿದರು.

ಇದೇ ವೇಳೆ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಕ್ಯಾಲೆಂಡರ್ ಅನ್ನು ಸಚಿವರು ಬಿಡುಗಡೆ ಮಾಡಿದರು. 

ಕೇಂದ್ರ ಪರಿಹಾರ ಸಮಿತಿಯ ಅಧ್ಯಕ್ಷರಾದ ಎಂ. ರಾಮಚಂದ್ರ, ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷರಾದ ಶಾಂತಮೂರ್ತಿ ಕುಲಗಾಣ, ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಸಚಿವರ ವಿಶೇಷ ಕರ್ತವ್ಯಾಧಿಕಾರಿ ಜಿ. ಜಯರಾಮ್, ಜಿಲ್ಲಾಧಿಕಾರಿ ಚಾರುಲತಾ ಸೋಮಲ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಕೆ.ಎಂ. ಗಾಯತ್ರಿ, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಎಸ್. ಸುಂದರ್ ರಾಜ್, ಹೆಚ್ಚುವರಿ ಜಿಲ್ಲಾಧಿಕಾರಿ ಎಸ್. ಕಾತ್ಯಾಯಿನಿದೇವಿ ಇತರರು ಸಭೆಯಲ್ಲಿ ಹಾಜರಿದ್ದರು.