ಚಾಮರಾಜನಗರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ವಿಶ್ವ ಮಲೇರಿಯ ದಿನಾಚರಣೆ ಅಂಗವಾಗಿ ಹಮ್ಮಿಕೊಂಡಿದ್ದ ಜಾಥಾಗೆ ನಗರದಲ್ಲಿಂದು ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಅವರು ಚಾಲನೆ ನೀಡಿದರು.
ಇದೇ ವೇಳೆ ಮಾತನಾಡಿದ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಅವರು ಪ್ರತಿಯೊಬ್ಬರೂ ಮಲೇರಿಯಾ ಸೇರಿದಂತೆ ಇತರೆ ರೋಗಗಳನ್ನು ಮುಂಜಾಗ್ರತೆಯಿಂದ ತಡೆಗಟ್ಟುವುದು ಅಗತ್ಯವಾಗಿದೆ. ಮಲೇರಿಯಾ ಹರಡುವ ಸೊಳ್ಳೆಗಳು ಕೊಳಚೆ ಪ್ರದೇಶಗಳಲ್ಲಿ ಉತ್ಪತ್ತಿಯಾಗುವುದರಿಂದ ಸುತ್ತಮುತ್ತಲಿನ ಸ್ಥಳಗಳು ಸ್ವಚ್ಚತೆಯಿಂದ ಕೂಡಿರುವಂತೆ ನೋಡಿಕೊಳ್ಳಬೇಕು. ಈ ನಿಟ್ಟಿನಲ್ಲಿ ಸಾರ್ವಜನಿಕರಿಗೆ ಜಾಗೃತಿ ಮೂಡಿಸುವ ಸಲುವಾಗಿ ಜಾಥಾ ಹಮ್ಮಿಕೊಳ್ಳಲಾಗಿದೆ. ಸಾರ್ವಜನಿಕರು ಮಲೇರಿಯಾ ಹರಡುವಿಕೆ ಹಾಗೂ ತಡೆಗಟ್ಟುವ ಬಗ್ಗೆ ಎಚ್ಚೆತ್ತುಕೊಳ್ಳಬೇಕು ಎಂದು ಶಾಸಕ ಸಿ.ಪುಟ್ಟರಂಗಶೆಟ್ಟಿ ತಿಳಿಸಿದರು.
ನಗರದ ಜಿಲ್ಲಾಡಳಿತ ಭವನದ ಮುಂಭಾಗದಿಂದ ಹೊರಟ ಜಾಥಾವು “ನವೀನ ವಿಧಾನಗಳನ್ನು ಬಳಸೋಣ-ಮಲೇರಿಯಾ ಕಡಿಮೆ ಮಾಡಿ ಜೀವ ಉಳಿಸೋಣ” ಎಂಬ ಘೋಷವಾಕ್ಯದೊಂದಿಗೆ ಹೊರಟು ಹೌಸಿಂಗ್ ಬೋರ್ಡ್‌ನ ಡಾ. ಬಿ.ಆರ್. ಅಂಬೇಡ್ಕರ್ ಉದ್ಯಾನವನದಲ್ಲಿ ಮುಕ್ತಾಯಗೊಂಡಿತು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಕಾಧಿಕಾರಿ ಕೆ.ಎಂ. ಗಾಯಿತ್ರಿ, ಹೆಚ್ಚುವರಿ ಜಿಲ್ಲಾಧಿಕಾರಿ ಎಸ್. ಕಾತ್ಯಾಯಿನಿದೇವಿ, ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಎನ್. ಕಾಂತರಾಜು, ಜಿಲ್ಲಾ ಕುಷ್ಠರೋಗ ನಿರ್ಮೂಲನಾ ಅಧಿಕಾರಿ ಡಾ. ಚಂದ್ರಶೇಖರ್, ತಾಲೂಕು ಆರೋಗ್ಯ ಅಧಿಕಾರಿ ಡಾ. ಶ್ರೀನಿವಾಸ್ ಸೇರಿದಂತೆ ಆರೋಗ್ಯ ಇಲಾಖೆಯ ಅಧಿಕಾರಿ, ಸಿಬ್ಬಂದಿ, ಶಾಲಾ ವಿದ್ಯಾರ್ಥಿಗಳು ಜಾಥಾದಲ್ಲಿ ಪಾಲ್ಗೊಂಡಿದ್ದರು.